ರಾಹುಲ್ ಗಾಂಧಿ (ಬಲಬದಿ)
(ಚಿತ್ರ ಕೃಪೆ: X/@RahulGandhi, ಪಿಟಿಐ)
ಪಟ್ನಾ: ಬಿಹಾರ ಲೋಕಸೇವಾ ಆಯೋಗದ (ಬಿಪಿಎಸ್‌ಸಿ) ಅಭ್ಯರ್ಥಿಗಳ ಮೇಲೆ ಪೊಲೀಸರ ಲಾಠಿ ಪ್ರಹಾರ ಮಾಡಿರುವ ಕ್ರಮವನ್ನು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬಲವಾಗಿ ಖಂಡಿಸಿದ್ದಾರೆ.
'ಎನ್‌ಡಿಎ ಸರ್ಕಾರವು ತನ್ನ ವೈಫಲ್ಯಗಳನ್ನು ಮುಚ್ಚಲು ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಮಾಡುತ್ತಿದೆ' ಎಂದು ಅವರು ಆರೋಪಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, 'ನಾನು ಸಂಸತ್ತಿನಲ್ಲಿ ಹೇಳಿದಂತೆ ಏಕಲವ್ಯನ ಹೆಬ್ಬೆರಳು ಕತ್ತರಿಸಿದಂತೆ ಪ್ರಶ್ನೆ ಪ್ರತ್ರಿಕೆ ಸೋರಿಕೆಯ ಮೂಲಕ ಆಕಾಂಕ್ಷಿಗಳ ಹೆಬ್ಬೆರಳು ಕತ್ತರಿಸಲಾಗುತ್ತಿದೆ' ಎಂದು ಅವರು ಟೀಕಿಸಿದ್ದಾರೆ.
'ಬಿಹಾರ ಇದಕ್ಕೆ ತಾಜಾ ಉದಾಹರಣೆಯಾಗಿದೆ. ಬಿಪಿಎಸ್‌ಸಿ ಅಭ್ಯರ್ಥಿಗಳು ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಧ್ವನಿ ಎತ್ತಿದ್ದು, ಪರೀಕ್ಷೆ ರದ್ದುಗೊಳಿಸಲು ಒತ್ತಾಯಿಸಿದ್ದಾರೆ. ಆದರೆ ವೈಫಲ್ಯ ಮರೆಮಾಚಲು ಎನ್‌ಡಿಎ ಸರ್ಕಾರ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಮಾಡುತ್ತಿದೆ' ಎಂದು ಅವರು ಹೇಳಿದ್ದಾರೆ.
'ಇದು ಅತ್ಯಂತ ನಾಚಿಕೆಗೇಡಿನ ಮತ್ತು ಖಂಡನೀಯ ಘಟನೆಯಾಗಿದೆ. ವಿದ್ಯಾರ್ಥಿಗಳ ಭವಿಷ್ಯದ ಜತೆ ಚೆಲ್ಲಾಟವಾಡುವುದನ್ನು ಸಹಿಸಲು ಸಾಧ್ಯವಿಲ್ಲ. ನಾವು ಅವರೊಂದಿಗಿದ್ದು, ನ್ಯಾಯ ದೊರಕಿಸಿಕೊಡಲು ಹೋರಾಡಲಿದ್ದೇವೆ' ಎಂದು ರಾಹುಲ್ ಹೇಳಿದ್ದಾರೆ.
ಬಿಪಿಎಸ್‌ಸಿ ಕಂಬೈನ್ಡ್ (ಪೂರ್ವಭಾವಿ) ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪಿಸಿ ಪಟ್ನಾದಲ್ಲಿ ಬುಧವಾರ ನಡೆದ ಪ್ರತಿಭಟನೆ ವೇಳೆ ಆಕಾಂಕ್ಷಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದರು.
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸಹ ಪೊಲೀಸ್ ಕ್ರಮವನ್ನು ಖಂಡಿಸಿದ್ದು, 'ಕುರ್ಚಿ ಉಳಿಸುವುದು ಮಾತ್ರ ಬಿಜೆಪಿಯ ಇರಾದೆಯಾಗಿದ್ದು, ಉದ್ಯೋಗ ಬಯಸಿದ ಯುವ ಜನತೆಯ ಮೇಲೆ ಲಾಠಿ ಪ್ರಹಾರ ಮಾಡಲಾಗುತ್ತದೆ' ಎಂದು ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.