ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಮತ್ತು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್
–ಪಿಟಿಐ ಚಿತ್ರಗಳು
ಮುಂಬೈ: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಸರಪಂಚ್ ಸಂತೋಷ್ ದೇಶಮುಖ್ ಹತ್ಯೆಯಿಂದಾಗಿ ಬೀಡ್-ಪರ್ಭಾನಿ ಜಿಲ್ಲೆಗಳಲ್ಲಿ ಉಂಟಾಗಿರುವ ಸಾಮಾಜಿಕ ಉದ್ವಿಗ್ನತೆಯನ್ನು ತಹಬಂದಿಗೆ ತರುವ ಪ್ರಯತ್ನಗಳ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರೊಂದಿಗೆ ಚರ್ಚೆ ನಡೆಸಿದ್ದೇನೆ ಎಂದು ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಕ್ಷಾತೀತವಾಗಿ ಎಲ್ಲರೂ ಒಟ್ಟಾಗಿ ಪ್ರಯತ್ನಿಸಿದರೆ ಮಾತ್ರ ಬೀಡ್-ಪರ್ಭಾನಿ ಜಿಲ್ಲೆಗಳಲ್ಲಿ ಉದ್ಭವಿಸಿರುವ ಉದ್ವಿಗ್ನತೆಯನ್ನು ಶಮನ ಮಾಡಲು ಸಾಧ್ಯ’ ಎಂದು ಅವರು ಹೇಳಿದ್ದಾರೆ.
ಬೀಡ್ ಜಿಲ್ಲೆಯ ಸರಪಂಚ್ ಆಗಿದ್ದ ಸಂತೋಷ್ ದೇಶ್‌ಮುಖ್ ಅವರನ್ನು ಡಿಸೆಂಬರ್ 9ರಂದು ಅಪಹರಿಸಿ, ಹತ್ಯೆ ಮಾಡಲಾಗಿತ್ತು. ಕಂಪನಿಯೊಂದರಿಂದ ಸುಲಿಗೆ ಮಾಡುತ್ತಿರುವುದನ್ನು ವಿರೋಧಿಸಿದ ಕಾರಣಕ್ಕೆ ಸಂತೋಷ್ ಹತ್ಯೆ ನಡೆದಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದರು. ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಈಗಾಗಲೇ ಬಂಧಿಸಲಾಗಿದೆ.
ಸಂತೋಷ್ ಹತ್ಯೆ ಪ್ರಕರಣದ ತನಿಖೆಗೆ ಮಹಾರಾಷ್ಟ್ರ ಸರ್ಕಾರ 10 ಜನರನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ.
ಅಪರಾಧ ತನಿಖಾ ವಿಭಾಗದ (ಸಿಐಡಿ) ಡಿಐಜಿ ಬಸವರಾಜ್ ತೆಲಿ ಅವರ ನೇತೃತ್ವದಲ್ಲಿ ಎಸ್‌ಐಟಿ ತನಿಖೆ ನಡೆಸಲಿದೆ ಎಂದು ಗೃಹ ಇಲಾಖೆ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.