ಮುಂಬೈ: ‘ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಬುಧವಾರ ನವದೆಹಲಿಯಲ್ಲಿ ಭೇಟಿಯಾಗುವ ಸಾಧ್ಯತೆಗಳಿವೆ’ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಮಂಗಳವಾರ ತಿಳಿಸಿದ್ದಾರೆ.
ಈ ವೇಳೆ ಮಮತಾ ಬ್ಯಾನರ್ಜಿ ಅವರು 2024ರ ಲೋಕಸಭೆ ಚುನಾವಣೆಗಾಗಿ ಬಿಜೆಪಿ ವಿರೋಧಿ ಪಕ್ಷಗಳನ್ನು ಒಗ್ಗೂಡಿಸುವ ಮಾರ್ಗಗಳ ಬಗ್ಗೆ ವಿರೋಧ ಪಕ್ಷದ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.
ಮಮತಾ ಬ್ಯಾನರ್ಜಿ ಅವರು ಸೋಮವಾರ ನವದೆಹಲಿಗೆ ಭೇಟಿ ನೀಡಿದ್ದು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಮೂರನೇ ಬಾರಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಅವರು ರಾಷ್ಟ್ರ ರಾಜಧಾನಿಗೆ ಬಂದಿದ್ದಾರೆ. ಈ ವೇಳೆ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಭೇಟಿಯಾಗುವ ಸಾಧ್ಯತೆಗಳಿವೆ.
ಬಳಿಕ ಅವರು ಸೋನಿಯಾ ಗಾಂಧಿ ಸೇರಿದಂತೆ ವಿರೋಧ ಪಕ್ಷದ ನಾಯಕರನ್ನು ಭೇಟಿಯಾಗಲಿದ್ದಾರೆ ಎನ್ನಲಾಗಿದೆ.
2024ರ ಲೋಕಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರು ಪ್ರಮುಖ ಪಾತ್ರ ವಹಿಸಲಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕರೊಂದಿಗಿನ ಅವರ ಭೇಟಿಯು ಮಹತ್ವ ಪಡೆದಿದೆ.
ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಪವಾರ್, ‘ಕಳೆದ ವಾರ ಮಮತಾ ಬ್ಯಾನರ್ಜಿ ಅವರು ನನಗೆ ಕರೆ ಮಾಡಿದ್ದರು. ಆಗ ದೆಹಲಿ ಭೇಟಿಯ ಬಗ್ಗೆ ತಿಳಿಸಿದರು. ಹಾಗಾಗಿ ಬುಧವಾರ ನಾವು ನವದೆಹಲಿಯಲ್ಲಿ ಭೇಟಿಯಾಗುವ ಸಾಧ್ಯತೆಗಳಿವೆ’ ಎಂದು ತಿಳಿಸಿದರು.
ಪೆಗಾಸಸ್ ಗೂಢಚರ್ಯೆ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ‘ಈ ಕುರಿತು ಏನೂ ಹೇಳುವುದಿಲ್ಲ. ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಎತ್ತುತ್ತೇವೆ. ಅದುವೇ ಸರಿಯಾದ ಸ್ಥಳ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.