
ನವದೆಹಲಿ: ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರನ್ನು ಹಸ್ತಾಂತರಿಸುವಂತೆ ಕೋರಿ ಬಾಂಗ್ಲಾದೇಶದ ಮನವಿ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಭಾರತ ಬುಧವಾರ ಹೇಳಿದೆ.
‘ಈ ಮನವಿಯು ಹಲವು ನ್ಯಾಯಿಕ ಹಾಗೂ ಆಂತರಿಕ ಕಾನೂನು ಪ್ರಕ್ರಿಯೆಗಳನ್ನು ಒಳಗೊಂಡಿರುವ ಕಾರಣ, ವ್ಯಾಪಕ ಪರಿಶೀಲನೆ ನಡೆಸಲಾಗುತ್ತಿದೆ. ಬಾಂಗ್ಲಾದೇಶದಲ್ಲಿ ಶಾಂತಿ ಸ್ಥಾಪನೆ, ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿಹಿಡಿಯುವುದು ಸೇರಿ ಆ ರಾಷ್ಟ್ರದ ಜನರ ಹಿತಾಸಕ್ತಿಗಳನ್ನು ಗಮನದಲ್ಲಿ ಇಟ್ಟುಕೊಂಡು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ವಿದೇಶಾಂಗ ಸಚಿವಾಲಯ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.
‘ಮಾನವೀಯತೆ ವಿರುದ್ಧದ ಅಪರಾಧ’ ಎಸಗಿದ್ದಕ್ಕಾಗಿ 78 ವರ್ಷದ ಹಸೀನಾ ಅವರಿಗೆ ಬಾಂಗ್ಲಾದೇಶದ ವಿಶೇಷ ನ್ಯಾಯಮಂಡಳಿಯೊಂದು ಮರಣ ದಂಡನೆ ವಿಧಿಸಿ ಕಳೆದ ವಾರ ತೀರ್ಪು ನೀಡಿದೆ.
ಕಳೆದ ವರ್ಷ ಆಗಸ್ಟ್ 5ರಂದು ಬಾಂಗ್ಲಾದೇಶದಲ್ಲಿ ಸರ್ಕಾರದ ವಿರುದ್ಧ ಭಾರಿ ಪ್ರತಿಭಟನೆ ಭುಗಿಲೆದ್ದ ಬಳಿಕ ದೇಶವನ್ನು ತೊರೆದಿರುವ ಹಸೀನಾ ಅವರು, ಸದ್ಯ ಬಾರತದಲ್ಲಿ ಆಶ್ರಯ ಪಡೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.