ಸಂಜಯ್ ರಾವುತ್
ಮುಂಬೈ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನಾ (ಯುಬಿಟಿ) ಪಕ್ಷವು ತಟಸ್ಥ ನಿಲುವು ತೆಗೆದುಕೊಂಡಿದ್ದು, ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಕಾಂಗ್ರೆಸ್ ಹಾಗೂ ಎಎಪಿ ಪರ ಪ್ರಚಾರ ನಡೆಸುವುದಿಲ್ಲ’ ಎಂದು ಪಕ್ಷದ ಮುಖಂಡ ಹಾಗೂ ಸಂಸದ ಸಂಜಯ್ ರಾವುತ್ ಅವರು ಮಂಗಳವಾರ ಸ್ಪಷ್ಟಪಡಿಸಿದ್ದಾರೆ.
ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟದಲ್ಲಿರುವ ಎಎಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಶಿವಸೇನಾಗೆ (ಯುಬಿಟಿ) ಮಿತ್ರ ಪಕ್ಷಗಳೇ ಆಗಿವೆ. ಆದರೆ ಈ ಚುನಾವಣೆಯಲ್ಲಿ ನಾವು ಯಾರ ಪರವಾಗಿಯೂ ಪ್ರಚಾರದಲ್ಲಿ ಭಾಗಿಯಾಗುವುದಿಲ್ಲ’ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಪ್ರಸಕ್ತ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಹಾಗೂ ತೃಣಮೂಲ ಕಾಂಗ್ರೆಸ್ ಪಕ್ಷಗಳು ಅರವಿಂದ ಕೇಜ್ರಿವಾಲ್ ನೇತೃತ್ವದ ಎಎಪಿಗೆ ಬೆಂಬಲ ಘೋಷಿಸಿವೆ. ಮತ್ತೊಂದೆಡೆ ಏಕನಾಥ ಶಿಂದೆ ನೇತೃತ್ವದ ಶಿವಸೇನೆಯು ಬಿಜೆಪಿಯನ್ನು ಬೆಂಬಲಿಸುತ್ತಿದೆ.
ಚುನಾವಣೆಯಲ್ಲಿ ಎಎಪಿ, ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಕೇಜ್ರಿವಾಲ್ ಅವರು ಮೂರನೇ ಬಾರಿಗೆ ಅಧಿಕಾರ ಹಿಡಿಯುವ ವಿಶ್ವಾಸದಲ್ಲಿದ್ದಾರೆ. 2020ರಲ್ಲಿ ನಡೆದ ಚುನಾವಣೆಯಲ್ಲಿ ಎಎಪಿಯು 70 ಕ್ಷೇತ್ರಗಳ ದೆಹಲಿ ವಿಧಾನಸಭೆಯಲ್ಲಿ 62 ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.