
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ಕೃಪೆ: ಪಿಟಿಐ
ಕೋಲ್ಕತ್ತ: ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿಯಿಂದ ಪಶ್ಚಿಮ ಬಂಗಾಳದಲ್ಲಿ ಬುಧವಾರ ಮತ್ತೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆಯು (ಎಸ್‌ಐಆರ್) ಜನರಲ್ಲಿ ಸೃಷ್ಟಿಸಿರುವ ಆತಂಕದಿಂದಾಗಿ ಇದುವರೆಗೆ ಒಟ್ಟು 9 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಆರೋಪಿಸಿದೆ.
ದಕ್ಷಿಣ 24 ಪರಗಣ ಜಿಲ್ಲೆಯ ಭಂಗಾರ್ ಎಂಬಲ್ಲಿ ಸಫೀಕುಲ್ ಗಾಝಿ ಎಂಬವರು ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ಪತಿ, ಕೆಲವು ದಿನಗಳ ಹಿಂದಷ್ಟೇ ಅಪಘಾತದಲ್ಲಿ ಗಾಯಗೊಂಡು, ಚೇತರಿಸಿಕೊಳ್ಳುತ್ತಿದ್ದರು. ಇಂತಹ ಸಂದರ್ಭದಲ್ಲೇ, ಕೇಂದ್ರಾಡಳಿತ ಪ್ರದೇಶಗಳೂ ಸೇರಿದಂತೆ 12 ರಾಜ್ಯಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಘೋಷಣೆಯಾಗಿದೆ. ಅದರಿಂದ ಅವರು ಆತಂಕಕ್ಕೆ ಒಳಗಾಗಿದ್ದರು. ಮತದಾನದ ಹಕ್ಕು ಕಳೆದುಕೊಳ್ಳುವ ಭಯ ಅವರನ್ನು ಆವರಿಸಿತ್ತು ಎಂದು ಗಾಝಿ ಪತ್ನಿ ಪೊಲೀಸರಿಗೆ ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದಾದ್ಯಂತ ಇರುವ 294 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಎಸ್‌ಐಆರ್ ನಡೆಸಲು ಚುನಾವಣಾ ಆಯೋಗವು 80,681 ಮಂದಿ ಬೂತ್ ಮಟ್ಟದ ಅಧಿಕಾರಿಗಳನ್ನು ನಿಯೋಜಿಸಿದೆ. ಅವರು, ಮನೆ ಮನೆ ಸಮೀಕ್ಷೆಯ ಎರಡನೇ ದಿನ (ಬುಧವಾರ) ಸಂಜೆ 4ರ ವರೆಗೆ ಸುಮಾರು 84 ಲಕ್ಷ ಗಣತಿ ನಮೂನೆಗಳನ್ನು ವಿತರಿಸಿದ್ದಾರೆ.
ಎಸ್‌ಐಆರ್ ವಿರುದ್ಧ ಟಿಎಂಸಿ ವತಿಯಿಂದ ಕೋಲ್ಕತ್ತದಲ್ಲಿ (ಮಂಗಳವಾರ) ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಎಸ್‌ಐಆರ್ ಘೋಷಣೆಯಾದಾಗಿನಿಂದ ಕೆಲವರು ಆತ್ಮಹತ್ಯೆ ಮಾಡಿಕೊಂಡು ಪ್ರಾಣ ಕಳೆದುಕೊಂಡಿದ್ದಾರೆ. ಅಂತಕದಲ್ಲಿರುವ ಇನ್ನೂ ಹಲವರು ಅನಾರೋಗ್ಯಕ್ಕೊಳಗಾಗಿದ್ದಾರೆ. ಚುನಾವಣಾ ಆಯೋಗ ಹಾಗೂ ಬಿಜೆಪಿ, ರಾಜ್ಯದಲ್ಲಿ ಭಯದ ವಾತಾವರಣ ಸೃಷ್ಟಿಸಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
'ಈ ರೀತಿಯ ದುರಂತಗಳು, ಮತದಾರರ ಹಕ್ಕುಗಳನ್ನು ಕಸಿದುಕೊಳ್ಳಲು ಹಾಗೂ ಬಡ ಜನರನ್ನು ಬೆದರಿಸಲು ಬಿಜೆಪಿ ನಡೆಸುತ್ತಿರುವ ಪಿತೂರಿಯ ಪರಿಣಾಮಗಳಾಗಿವೆ' ಎಂದು ಟಿಎಂಸಿ ಶಾಸಕ ಶೌಕತ್ ಮೊಲ್ಲಾ ದೂರಿದ್ದರು.
ಆದರೆ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಸಮಿಕ್ ಭಟ್ಟಾಚಾರ್ಯ ಅವರು ಟಿಎಂಸಿ ಮಾಡುತ್ತಿರುವ ಆರೋಪಗಳನ್ನು ಅಲ್ಲಗಳೆದಿದ್ದಾರೆ.
'ಎಸ್‌ಐಆರ್ ಎಂಬುದು ದೇಶದಾದ್ಯಂತ ಮತದಾರರ ಪಟ್ಟಿಯನ್ನು ಪರಿಷ್ಕರಿಸುವ ಉದ್ದೇಶದಿಂದ ಚುನಾವಣಾ ಆಯೋಗ ನಡೆಸುತ್ತಿರುವ ಪ್ರಕ್ರಿಯೆಯಾಗಿದೆ. ಆತ್ಮಹತ್ಯೆ ಪ್ರಕರಣಗಳನ್ನು ರಾಜಕೀಯ ಲಾಭಕ್ಕಾಗಿ ಮತ್ತು ಬಿಜೆಪಿಯನ್ನು ಕೆಣಕಲು ಬಳಸಿಕೊಳ್ಳಲಾಗುತ್ತಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಬೇಕಿರುವುದು ರಾಜ್ಯ ಸರ್ಕಾರದ ಕರ್ತವ್ಯವೇ ಹೊರತು ನಮ್ಮದಲ್ಲ' ಎಂದು ತಿರುಗೇಟು ನೀಡಿದ್ದಾರೆ.
ಮಮತಾ ನಿವಾಸಕ್ಕೆ 17 ನಮೂನೆ
ಕಾಲಿಘಾಟ್‌ನಲ್ಲಿರುವ ಮಮತಾ ಬ್ಯಾನರ್ಜಿ ಅವರ ನಿವಾಸಕ್ಕೆ ಬೂತ್ ಮಟ್ಟದ ಅಧಿಕಾರಿಗಳು ಬುಧವಾರ ಭೇಟಿ ನೀಡಿದ್ದಾರೆ. ಟಿಎಂಸಿ ಮುಖ್ಯಸ್ಥೆಯೂ ಆಗಿರುವ ಮಮತಾ ಹಾಗೂ ಅವರ ಕುಟುಂಬದವರಿಗೆ ಎಸ್‌ಐಆರ್‌ಗೆ ಸಂಬಂಧಿಸಿದ 17 ಗಣತಿ ನಮೂನೆಗಳನ್ನು ವಿತರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.