
ಸುಪ್ರೀಂ ಕೋರ್ಟ್
ನವದೆಹಲಿ: ಬಿಹಾರವೂ ಸೇರಿದಂತೆ ಹಲವು ರಾಜ್ಯಗಳಲ್ಲಿ ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜ.13ಕ್ಕೆ ಮುಂದೂಡಿದೆ.
ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್ ನೇತೃತ್ವದ ಪೀಠವು, ಎಸ್‌ಐಆರ್ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಜ.8ರಂದು ನಿಗದಿಪಡಿಸಿತ್ತು. ಚುನಾವಣಾ ಆಯೋಗದ ಪರವಾಗಿ ವಕೀಲ ರಾಕೇಶ್ ದ್ವಿವೇದಿ ವಾದ ಮಂಡಿಸಲು ಹಾಜರಾಗಿದ್ದರು. ಆದರೆ, ವಿಚಾರಣೆಯನ್ನು ಮುಂದೂಡಲಾಗಿದೆ ಎಂದು ಸಿಜೆಐ ತಿಳಿಸಿದರು.
‘ಎಸ್ಐಆರ್’ ನಡೆಸಲು ತನಗೆ ಅಧಿಕಾರ ಮತ್ತು ಸಾಮರ್ಥ್ಯ ಎರಡೂ ಇದೆ. ಯಾವುದೇ ವಿದೇಶಿ ವ್ಯಕ್ತಿ ‘ಮತದಾರ’ನಾಗಿ ನೋಂದಣಿಯಾಗಿದ್ದಾರೆಯೇ ಎನ್ನುವುದನ್ನು ಖಾತ್ರಿಪಡಿಸಿಕೊಳ್ಳುವುದು ಚುನಾವಣಾ ಆಯೋಗದ ಸಾಂವಿಧಾನಿಕ ಕರ್ತವ್ಯವೂ ಆಗಿದೆ’ ಎಂದು ಆಯೋಗ ಸುಪ್ರೀಂ ಕೋರ್ಟ್‌ಗೆ ಜ.6ರಂದು ತಿಳಿಸಿತ್ತು.
‘ಎಸ್‌ಐಆರ್’ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಹಲವು ರಾಜಕೀಯ ಪಕ್ಷಗಳು, ಸಂಘಟನೆಗಳು, ವ್ಯಕ್ತಿಗಳು ಅರ್ಜಿ ಸಲ್ಲಿಸಿದ್ದು, ಚುನಾವಣಾ ಆಯೋಗ ಹೊಂದಿರುವ ಅಧಿಕಾರದ ಸ್ವರೂಪ, ಪೌರತ್ವ, ಮತದಾನ ಹಕ್ಕು ಸೇರಿದಂತೆ ಹಲವು ಮಹತ್ವದ ಸಾಂವಿಧಾನಿಕ ಪ್ರಶ್ನೆಗಳನ್ನು ಎತ್ತಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.