ಸಾಂದರ್ಭಿಕ ಚಿತ್ರ
ನವದೆಹಲಿ: ವಾಯುವ್ಯ ದೆಹಲಿಯ ಪಿಟಾಂಪುರ ಪ್ರದೇಶದಲ್ಲಿ ಗುರುವಾರ ಸಂಜೆ ಬಹುಮಡಿ ಕಟ್ಟಡವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ 6 ಮಂದಿ ಸಜೀವ ದಹನವಾಗಿದ್ದು, ಒಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಟ್ಟಡದ ಮೊದಲ ಮಹಡಿಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಕಾರಣ ಏನೆಂಬುದು ಗೊತ್ತಾಗಬೇಕಷ್ಟೇ.
ಪಿಟಾಂಪುರದ ಜೆಡ್.ಪಿ ಬ್ಲಾಕ್‌ನ ನಂ.37ರಲ್ಲಿ ಬೆಂಕಿ ಹೊತ್ತಿಕೊಂಡಿರುವ ಬಗ್ಗೆ ಮಾಹಿತಿ ಬಂತು. 8 ಅಗ್ನಿಶಾಮಕ ವಾಹನವನ್ನು ಸ್ಥಳಕ್ಕೆ ಕಳುಹಿಸಿಕೊಡಲಾಯಿತು ಎಂದು ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಸ್ಥಳೀಯ ಪೊಲೀಸರ ನೆರವಿನಿಂದ 7 ಮಂದಿಯನ್ನು ರಕ್ಷಿಸಿ ಬಾಬು ಜಗಜೀವನರಾಮ್ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ನಾಲ್ವರು ಮಹಿಳೆ ಸೇರಿ 6 ಮಂದಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿ ಸೇವೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಒಂದು ಗಂಟೆಯಲ್ಲಿ ಬೆಂಕಿಯನ್ನು ನಂದಿಸಿ, ಕೂಲಿಂಗ್ ಕಾರ್ಯಾಚರಣೆ ನಡೆಸಲಾಯಿತು ಎಂದು ಮತ್ತೊರ್ವ ಅಧಿಕಾರಿ ತಿಳಿಸಿದ್ದಾರೆ.
ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದರ ಹೊಗೆ ಮೇಲಿನ ಮೂರು ಮಹಡಿಗಳಿಗೆ ಹಬ್ಬಿಕೊಂಡಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಮೃತಪಟ್ಟವರು ಎರಡು ಕುಟುಂಬಗಳಿಗೆ ಸೇರಿದವರು. ಅವರೆಲ್ಲರೂ 25–60 ವಯಸ್ಸಿನ ನಡುವಿನವರು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.