ADVERTISEMENT

ಪುಣೆ: ನಿರ್ಮಾಣ ಹಂತದ ಕಟ್ಟಡ ಕುಸಿದು ಆರು ಮಂದಿ ಸಾವು, ಹಲವರಿಗೆ ಗಾಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಫೆಬ್ರುವರಿ 2022, 2:33 IST
Last Updated 4 ಫೆಬ್ರುವರಿ 2022, 2:33 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಪುಣೆ: ಪುಣೆಯ ಯರವಾಡ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಚಾವಣಿ ಕುಸಿದ ಪರಿಣಾಮ ಕನಿಷ್ಠ ಆರು ಮಂದಿ ಮೃತಪಟ್ಟಿದ್ದು, ಹಲವರು ಸಿಲುಕಿರುವ ಶಂಕೆ ಇದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಯರವಾಡ ವ್ಯಾಪ್ತಿಯ ಶಾಸ್ತ್ರಿ ನಗರದ ಲೇನ್ ಸಂಖ್ಯೆ 8 ರಲ್ಲಿ ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತಿತ್ತು. ಗುರುವಾರ ರಾತ್ರಿ 11 ಗಂಟೆಗೆ ಈ ಕಟ್ಟಡದ ಚಾವಣಿ ಕುಸಿಯಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಘಟನೆ ಕುರಿತು ಮಾಹಿತಿ ನೀಡಿರುವ ಯರವಾಡ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್‌ ಶೇಖ್, ‘ಇದುವರೆಗೆ ಆರು ಮಂದಿ ಮೃತಪಟ್ಟಿರುವುದು ತಿಳಿದುಬಂದಿದೆ. ಅವರ ದೇಹಗಳನ್ನು ಸಾಸೂನ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇದು ನಿರ್ಮಾಣ ಹಂತದಲ್ಲಿರುವ ಕಟ್ಟಡವಾಗಿದ್ದು, ಘಟನೆ ಸಂಭವಿಸಿದಾಗ ಕಾರ್ಮಿಕರು ಚಾವಣಿ ಕೆಲಸದಲ್ಲಿ ತೊಡಗಿದ್ದರು’ ಎಂದು ಹೇಳಿದ್ದಾರೆ.

ADVERTISEMENT

ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.

ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.