ಪುಲ್ವಾಮಾ ದಾಳಿ ಸಂದರ್ಭ ಫೈಲ್ ಫೋಟೊ
ನವದೆಹಲಿ: ಜಮ್ಮು–ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಯೋಧರ ಮೇಲೆ ಉಗ್ರರು ನಡೆಸಿದ್ದ ಭೀಕರ ದಾಳಿಗೆ ಇಂದಿಗೆ (ಫೆ.14) ಆರು ವರ್ಷವಾಗಿದೆ. ದಾಳಿಯಲ್ಲಿ 40 ಯೋಧರು ಹುತಾತ್ಮರಾಗಿದ್ದರು.
ಪ್ರಧಾನಿ ನರೇಂದ್ರ ಮೋದಿ ಸೇರಿ ಅನೇಕ ಗಣ್ಯರು ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, 2019ರಲ್ಲಿ ನಡೆದ ಭೀಕರ ದಾಳಿಯಲ್ಲಿ ಧೈರ್ಯಶಾಲಿ ಯೋಧರನ್ನು ಕಳೆದುಕೊಂಡಿದ್ದೇವೆ. ಯೋಧರ ತ್ಯಾಗ ಬಲಿದಾನವನ್ನು ದೇಶ ಎಂದಿಗೂ ಮರೆಯುವುದಿಲ್ಲ ಎಂದು ತಿಳಿಸಿದ್ದಾರೆ.
'ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ವಿನಮ್ರ ಗೌರವ ಸಲ್ಲಿಸುತ್ತೇನೆ. ಅವರ ತ್ಯಾಗವನ್ನು ಭಾರತ ಎಂದಿಗೂ ಮರೆಯುವುದಿಲ್ಲ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಾಮಾಜಿಕ ಜಾಲತಾಣ ಎಕ್ಸ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
2019 ರ ಈ ದಿನದಂದು, ಪುಲ್ವಾಮಾದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಭಾರತವು ಧೈರ್ಯಶಾಲಿ ಸಿಆರ್‌ಪಿಎಫ್ ಸಿಬ್ಬಂದಿಯನ್ನು ಕಳೆದುಕೊಂಡಿತು. ದೇಶಕ್ಕಾಗಿ ಯೋಧರು ಮಾಡಿದ ತ್ಯಾಗವನ್ನು ಎಂದಿಗೂ ಮರೆಯಲಾಗುವುದಿಲ್ಲ. ಹುತಾತ್ಮ ಯೋಧರಿಗೆ ಗೌರವ ಸಲ್ಲಿಸುತ್ತೇನೆ ಮತ್ತು ಅವರ ಕುಟುಂಬಗಳ ಜತೆ ಸರ್ಕಾರ ಇದೆ. ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಭಾರತ ದೃಢನಿಶ್ಚಯದಿಂದ ಇದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಕ್ಸ್‌ನಲ್ಲಿ ತಿಳಿಸಿದ್ದಾರೆ.
‘ಪುಲ್ವಾಮಾ ದಾಳಿ ಭಾರತದ ಇತಿಹಾಸದಲ್ಲಿ ಅತ್ಯಂತ ಕರಾಳ ದಿನ. ದೇಶಕ್ಕಾಗಿ ಹುತಾತ್ಮರಾದ ಎಲ್ಲಾ ವೀರಯೋಧರ ತ್ಯಾಗ - ಬಲಿದಾನವನ್ನು ಸ್ಮರಿಸುತ್ತಾ, ನನ್ನ ಗೌರವ ನಮನ ಅರ್ಪಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
ದೇಶ ರಕ್ಷಣೆಯಲ್ಲಿ ನಿರತರಾಗಿದ್ದ ಸಂದರ್ಭದಲ್ಲಿ ಪುಲ್ವಾಮಾ ದಾಳಿಯಲ್ಲಿ ವೀರಮರಣವನ್ನಪ್ಪಿದ ನಮ್ಮೆಲ್ಲ ಯೋಧರಿಗೆ ಗೌರವಪೂರ್ವಕ ನಮನಗಳು. ನಮ್ಮ ವೀರ ಯೋಧರ ತ್ಯಾಗ ಹಾಗೂ ಬಲಿದಾನಗಳನ್ನು ಸ್ಮರಿಸೋಣ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಎಕ್ಸ್‌ನಲ್ಲಿ ತಿಳಿಸಿದ್ದಾರೆ.
ಭಾರತೀಯರು ಎಂದೂ ಮರೆಯಲಾರದ ಕರಾಳ ದಿನ 'ಪುಲ್ವಾಮಾ ದಾಳಿ ಹುತಾತ್ಮರ ಸಂಸ್ಮರಣಾ ದಿನ’. ದೇಶ ರಕ್ಷಣೆಯಲ್ಲಿ ನಿರತರಾಗಿದ್ದ ಸಂದರ್ಭದಲ್ಲಿ ಪುಲ್ವಾಮಾ ದಾಳಿಯಲ್ಲಿ ವೀರಮರಣವನ್ನಪ್ಪಿದ ನಮ್ಮೆಲ್ಲ ಯೋಧರಿಗೆ ಗೌರವಪೂರ್ವಕ ನಮನಗಳು. ನಮ್ಮ ವೀರ ಯೋಧರ ತ್ಯಾಗ ಹಾಗೂ ಬಲಿದಾನಗಳನ್ನು ಸ್ಮರಿಸೋಣ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.