ದದೆ
ನವದೆಹಲಿ: ಸೌಮ್ಯ ವಿಶ್ವನಾಥನ್ ಕೊಲೆ ಪ್ರಕರಣದಲ್ಲಿ ತಮ್ಮನ್ನು ತಪ್ಪಿತಸ್ಥರು ಎಂದು ಘೋಷಿಸಿ, ಶಿಕ್ಷೆ ವಿಧಿಸಿರುವುದನ್ನು ಪ್ರಶ್ನಿಸಿ ನಾಲ್ವರು ಅಪರಾಧಿಗಳು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಬೇಕು ಎಂದು ದೆಹಲಿ ಪೊಲೀಸರಿಗೆ ಹೈಕೋರ್ಟ್ ಮಂಗಳವಾರ ಸೂಚಿಸಿದೆ.
ನ್ಯಾಯಮೂರ್ತಿಗಳಾದ ಸುರೇಶ್ ಕುಮಾರ್ ಕೈತ್ ಮತ್ತು ಮನೋಜ್ ಜೈನ್ ಅವರನ್ನು ಒಳಗೊಂಡ ನ್ಯಾಯಪೀಠವು ಈ ಸಂಬಂಧ ದೆಹಲಿ ಪೊಲೀಸರಿಗೆ ನೋಟಿಸ್ ನೀಡಿದೆ.
ಇಲ್ಲಿನ ವಿಶೇಷ ನ್ಯಾಯಾಲಯವೊಂದು ನವೆಂಬರ್ 26, 2023ರಂದು ಪ್ರಕರಣದ ಅಪರಾಧಿಗಳಾದ ರವಿ ಕಪೂರ್, ಅಮಿತ್ ಶುಕ್ಲಾ, ಬಲ್ಜೀತ್ ಮಲಿಕ್ ಮತ್ತು ಅಜಯ್ ಸಿಂಗ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ನಾಲ್ವರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಪ್ರಕರಣವನ್ನು ಫೆಬ್ರುವರಿ 12ರಂದು ವಿಚಾರಣೆ ನಡೆಸಲು ಹೈಕೋರ್ಟ್ ಪಟ್ಟಿ ಮಾಡಿದೆ.
ಸೌಮ್ಯ ಅವರು ಇಂಗ್ಲಿಷ್ ಸುದ್ದಿ ಮಾಧ್ಯಮವೊಂದರಲ್ಲಿ ಕೆಲಸ ಮಾಡುತ್ತಿದ್ದರು. 2008ರ ಸೆಪ್ಟೆಂಬರ್ 30ರಂದು ಮುಂಜಾನೆ ಕೆಲಸ ಮುಗಿಸಿಕೊಂಡು ಕಾರಿನಲ್ಲಿ ಮನೆಗೆ ಮರಳುತ್ತಿದ್ದರು. ಈ ವೇಳೆ ಅವರ ತಲೆಗೆ ಗುಂಡು ಹಾರಿಸಿ ಹತ್ಯೆಗೈಯಲಾಗಿತ್ತು. ದರೋಡೆ ಮಾಡುವ ಉದ್ದೇಶದಿಂದ ಈ ಕೊಲೆ ನಡೆದಿತ್ತು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.