ADVERTISEMENT

ದಕ್ಷಿಣ ಪಿನಾಕಿನಿ: ನ್ಯಾಯಮಂಡಳಿಗೆ ತಮಿಳುನಾಡು ಪಟ್ಟು

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2025, 15:37 IST
Last Updated 8 ಸೆಪ್ಟೆಂಬರ್ 2025, 15:37 IST
   

ನವದೆಹಲಿ: ಪೆನ್ನಾರ್ (ದಕ್ಷಿಣ ಪಿನಾಕಿನಿ) ನದಿ ನೀರು ಹಂಚಿಕೆ ವಿವಾದ ಬಗೆಹರಿಸಲು ನ್ಯಾಯಮಂಡಳಿ ರಚಿಸಬೇಕು ಎಂದು ತಮಿಳುನಾಡು ಸರ್ಕಾರ ಮತ್ತೆ ಪಟ್ಟು ಹಿಡಿದಿದೆ. 

ವಿವಾದ ಬಗೆಹರಿಸಲು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ ಅವರು ಕರೆದಿದ್ದ ಎರಡು ಸಭೆಗಳನ್ನು ತಮಿಳುನಾಡು ಬಹಿಷ್ಕರಿಸಿತ್ತು. ಸುಪ್ರೀಂ ಕೋರ್ಟ್‌ನಲ್ಲಿ ಸೋಮವಾರ ನಡೆದ ವಿಚಾರಣೆ ಸಂದರ್ಭದಲ್ಲೂ ತಮಿಳುನಾಡು ಇದೇ ನಿಲುವು ತಳೆಯಿತು. ಬಳಿಕ ವಿಚಾರಣೆಯನ್ನು ಇದೇ 23ಕ್ಕೆ ಮುಂದೂಡಲಾಯಿತು. 

ದಕ್ಷಿಣ ಪಿನಾಕಿನಿ ನದಿಯ ಕಣಿವೆಯಲ್ಲಿ ಕರ್ನಾಟಕ ಸರ್ಕಾರವು ಮಾರ್ಕಂಡೇಯ ನದಿಗೆ ಅಡ್ಡಲಾಗಿ ಅಣೆಕಟ್ಟೆ ನಿರ್ಮಿಸಿದೆ. ಬೆಂಗಳೂರಿನ ಎಲೆ ಮಲ್ಲಪ್ಪ ಚೆಟ್ಟಿ ಕೆರೆಯಿಂದ ಹೊಸಕೋಟೆಯವರೆಗೆ ನೀರು ಹರಿಸುವ ಕಾಮಗಾರಿ, ಬ್ಯಾಲಹಳ್ಳಿ ಗ್ರಾಮದ ಹತ್ತಿರ ಪಿನಾಕಿನಿ ನದಿಯಿಂದ ನೀರು ಹರಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದೆ. ಈ ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸಿ ಸುಪ್ರೀಂ ಕೋರ್ಟ್‌ಗೆ 2018ರ ಮೇ 18ರಂದು ಅರ್ಜಿ ಸಲ್ಲಿಸಿತ್ತು. ಜಲವಿವಾದ ನ್ಯಾಯಮಂಡಳಿ ಸ್ಥಾಪಿಸುವಂತೆ ಒತ್ತಾಯಿಸಿ ತಮಿಳುನಾಡು ಸರ್ಕಾರವು ಕೇಂದ್ರ ಸರ್ಕಾರಕ್ಕೆ 2019ರ ನವೆಂಬರ್‌ ತಿಂಗಳಲ್ಲಿ ಮನವಿ ಮಾಡಿತ್ತು. 

ADVERTISEMENT

ಜಲಶಕ್ತಿ ಸಚಿವಾಲಯವು 2020ರಲ್ಲಿ ಸಂಧಾನ ಸಭೆ ನಡೆಸಿತ್ತು. ಆದರೆ, ರಾಜ್ಯ ಸರ್ಕಾರಗಳು ಒಮ್ಮತಕ್ಕೆ ಬಂದಿರಲಿಲ್ಲ. ಹೊಸದಾಗಿ ಸಂಧಾನ ನಡೆಸುವಂತೆ ಕರ್ನಾಟಕ ಸರ್ಕಾರವು ಕೇಂದ್ರಕ್ಕೆ 2024ರ ಜೂನ್‌ನಲ್ಲಿ ಒತ್ತಾಯಿಸಿತ್ತು. 

ಈ ನಡುವೆ, ಸುಪ್ರೀಂ ಕೋರ್ಟ್‌ ನಿರ್ದೇಶನದ ಪ್ರಕಾರ, ಕೇಂದ್ರ ಜಲ ಆಯೋಗದ ಅಧ್ಯಕ್ಷರ ನೇತೃತ್ವದಲ್ಲಿ ಜಲಶಕ್ತಿ ಸಚಿವಾಲಯವು ಹೊಸ ಸಂಧಾನ ಸಮಿತಿ ರಚಿಸಿತ್ತು. ಈ ಸಮಿತಿಯು ಉಭಯ ರಾಜ್ಯಗಳ ನಡುವೆ ಒಂಬತ್ತು ಸಭೆಗಳನ್ನು ನಡೆಸಿತ್ತು ಹಾಗೂ ಯೋಜನಾ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.