ಲಖನೌ: ಭಯೋತ್ಪಾದನೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯ ಘಟನೆ ತುಂಬಾ ದುಃಖಕರ ಮತ್ತು ಖಂಡನೀಯ. ದಾಳಿ ಬಗ್ಗೆ ಸರ್ಕಾರವು ಬಲವಾದ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ನಾವು ಭಾವಿಸುತ್ತೇವೆ’ ಎಂದು ಹೇಳಿದ್ದಾರೆ.
‘ಪಹಲ್ಗಾಮ್‌ನಲ್ಲಿ ನಡೆದ ಘಟನೆ ಭವಿಷ್ಯದಲ್ಲಿ ಮತ್ತೆ ಸಂಭವಿಸಬಾರದು ಎಂದು ಇಡೀ ದೇಶ ಬಯಸುತ್ತದೆ. ಸರ್ಕಾರಕ್ಕೆ ಎಲ್ಲ ರೀತಿಯಲ್ಲೂ ಬೆಂಬಲವಿದೆ. ಪ್ರವಾಸಿಗರ ಸುರಕ್ಷತೆಗೆ ಯಾವುದೇ ಸೂಕ್ತ ವ್ಯವಸ್ಥೆ ಇರಲಿಲ್ಲ. ಘಟನೆಗೆ ಭದ್ರತೆ ಮತ್ತು ಗುಪ್ತಚರ ಇಲಾಖೆಯ ವೈಫಲ್ಯವೇ ಕಾರಣ ಎಂದು ಎಲ್ಲರೂ ಹೇಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಗುಪ್ತಚರ ಇಲಾಖೆ ವಿಫಲವಾಗಬಾರದು ಎಂದು ಆಶಿಸುತ್ತೇನೆ’ ಎಂದು ಅಖಿಲೇಶ್ ತಿಳಿಸಿದ್ದಾರೆ.
‘ಬಿಜೆಪಿ ಸರ್ಕಾರ ತನ್ನ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ದೇಶದ ಭದ್ರತೆ, ಗಡಿಗಳ ರಕ್ಷಣೆ ಮತ್ತು ಆರ್ಥಿಕತೆಗೆ ಸಂಬಂಧಿಸಿದಂತೆ ನೀಡಿರುವ ಭರವಸೆಗಳನ್ನು ಸರ್ಕಾರ ಜಾರಿಗೊಳಿಸುತ್ತದೆ ಎಂದು ನಾವು ಭಾವಿಸುತ್ತೇವೆ. ಈ ಘಟನೆಯ ಬಗ್ಗೆ ಬಿಜೆಪಿ ರಾಜಕೀಯ ಮಾಡಬಾರದು’ ಎಂದು ಅವರು ಹೇಳಿದ್ದಾರೆ.
ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದವರ ಕುಟುಂಬಗಳಿಗೆ ₹5 ಕೋಟಿ ಪರಿಹಾರ ಮತ್ತು ಸರ್ಕಾರಿ ಉದ್ಯೋಗ ನೀಡುವಂತೆ ಅಖಿಲೇಶ್ ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.