
ನವದೆಹಲಿ: ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಕುರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 7ರಂದು ತೀರ್ಪು ಪ್ರಕಟಿಸುವುದಾಗಿ ಸುಪ್ರೀಂ ಕೋರ್ಟ್ ಸೋಮವಾರ ತಿಳಿಸಿದೆ.
ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್.ವಿ.ಅಂಜಾರಿಯಾ ಅವರನ್ನು ಒಳಗೊಂಡ ವಿಶೇಷ ನ್ಯಾಯಪೀಠವು ವಿಚಾರಣೆ ನಡೆಸಿತು. ಈ ಸಂದರ್ಭದಲ್ಲಿ ಬಹುತೇಕ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳು ಉಪಸ್ಥಿತರಿದ್ದುದನ್ನು ಪೀಠವು ಗಮನಿಸಿತು.
ಕೇರಳದ ಮುಖ್ಯ ಕಾರ್ಯದರ್ಶಿ ಅವರು ಖುದ್ದು ಹಾಜರಿಯಿಂದ ವಿನಾಯಿತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿತು. ಅವರ ಪರವಾಗಿ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ವಿಚಾರಣೆಯಲ್ಲಿ ಭಾಗಿಯಾಗಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಣಿಗಳ ಕಲ್ಯಾಣ ಮಂಡಳಿಯನ್ನೂ ಕಕ್ಷಿದಾರರಾಗಿ ನೇಮಿಸಲಾಗಿದೆ ಎಂದು ತಿಳಿಸಿತು. ಬಳಿಕ ತೀರ್ಪನ್ನು ನವೆಂಬರ್ 7ಕ್ಕೆ ಕಾಯ್ದಿರಿಸಿತು.
ಇನ್ನು ಮುಂದೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳು ಖುದ್ದಾಗಿ ವಿಚಾರಣೆಗೆ ಹಾಜರಾಗುವ ಅಗತ್ಯ ಇಲ್ಲ. ಆದರೆ, ನ್ಯಾಯಾಲಯದ ಆದೇಶ ಪಾಲನೆಯಲ್ಲಿ ಲೋಪ ಕಂಡುಬಂದಲ್ಲಿ ಅವರು ಮತ್ತೆ ಹಾಜರಾಗಬೇಕಾಗುತ್ತದೆ ಎಂದು ತಿಳಿಸಿತು.
ದೆಹಲಿಯಲ್ಲಿ ಬೀದಿ ನಾಯಿ ಕಡಿತದ ಪ್ರಕರಣಗಳು ಹೆಚ್ಚಾಗಿದ್ದು, ಅದರಲ್ಲೂ ಮಕ್ಕಳು ರೇಬಿಸ್‌ಗೆ ಬಲಿಯಾಗುತ್ತಿದ್ದಾರೆ ಎಂಬ ಮಾಧ್ಯಮ ವರದಿ ಆಧಾರದ ಮೇಲೆ ಜುಲೈ 28ರಂದು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಸುಪ್ರೀಂ ಕೋರ್ಟ್, ಅದರ ವಿಚಾರಣೆಯನ್ನು ನಡೆಸುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.