
ಸುಪ್ರೀಂ ಕೋರ್ಟ್
ನವದೆಹಲಿ: ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣ ಹಾಗೂ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಹೊರಡಿಸಿರುವ ಮಾರ್ಗಸೂಚಿಗಳ ಅನುಷ್ಠಾನದ ಬಗ್ಗೆ ಎಂಟು ವಾರಗಳಲ್ಲಿ ಪ್ರಮಾಣಪತ್ರ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೋಮವಾರ ಸೂಚಿಸಿದೆ.
ನ್ಯಾಯಮೂರ್ತಿಗಳಾದ ವಿಕ್ರಮನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು, ‘ಈ ಮಾರ್ಗಸೂಚಿಗಳನ್ನು ಜಾರಿಗೆ ತರಲು ತೆಗೆದುಕೊಂಡ ಕ್ರಮಗಳನ್ನು ವಿವರಿಸುವ ಅನುಸರಣಾ ಪ್ರಮಾಣಪತ್ರವನ್ನು ಕೇಂದ್ರವು ಕೋರ್ಟ್‌ಗೆ ಸಲ್ಲಿಸಬೇಕು. ಈ ವಿಷಯದಲ್ಲಿ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಪ್ರತಿವಾದಿಗಳನ್ನಾಗಿ ಸೇರಿಸಬೇಕು. ಎಂಟು ವಾರಗಳಲ್ಲಿ ತಮ್ಮ ಪ್ರತಿಕ್ರಿಯೆ ಸಲ್ಲಿಸಬಹುದು’ ಎಂದು ಪೀಠವು ನಿರ್ದೇಶಿಸಿತು. ಈ ಪ್ರಕರಣದ ಮುಂದಿನ ವಿಚಾರಣೆಯನ್ನು 2026ರ ಜನವರಿಗೆ ಮುಂದೂಡಿದೆ.
ಶಿಕ್ಷಣ ಸಂಸ್ಥೆಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದನ್ನು ಗಮನಿಸಿದ್ದ ಸುಪ್ರೀಂ ಕೋರ್ಟ್, ಇದರ ತಡೆಗೆ ದೇಶದಾದ್ಯಂತ ಜಾರಿಯಾಗುವ ಮಾರ್ಗಸೂಚಿಗಳನ್ನು ಜುಲೈ 25ರಂದು ಬಿಡುಗಡೆ ಮಾಡಿತ್ತು. ಆ ಮಾರ್ಗಸೂಚಿಗಳ ಅನುಷ್ಠಾನ ಸಂಬಂಧ ವಿಚಾರಣೆ ನಡೆಸುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.