ನವದೆಹಲಿ: ನಾಗರಿಕ ಸೇವಾ ಪೂರ್ವಭಾವಿ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ವಯಸ್ಸು ದೃಢಪಡಿಸುವ ಮತ್ತು ಮೀಸಲಾತಿ ಸಂಬಂಧಿತ ದಾಖಲೆಗಳನ್ನು ಸಲ್ಲಿಸುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ.
ಆನ್‌ಲೈನ್ ಅರ್ಜಿ ನಮೂನೆಯೊಂದಿಗೆ ಅಗತ್ಯ ಮಾಹಿತಿ ಮತ್ತು ದಾಖಲೆಗಳನ್ನು ಒದಗಿಸಲು ವಿಫಲವಾದರೆ ಅಭ್ಯರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ ಎಂದು ಜನವರಿ 22ರಂದು ಹೊರಡಿಸಿರುವ ‘ನಾಗರಿಕ ಸೇವಾ ಪರೀಕ್ಷೆಗಳ ನಿಯಮ–2025’ರಲ್ಲಿ ತಿಳಿಸಲಾಗಿದೆ.
ಈ ಮೊದಲು, ಅಭ್ಯರ್ಥಿಗಳು ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಬಳಿಕ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕಾಗಿತ್ತು.
ಮಾಜಿ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರು ನಕಲಿ ದಾಖಲೆಗಳನ್ನು ನೀಡಿದ್ದ ಆರೋಪ ಈಚೆಗೆ ಕೇಳಿಬಂದಿತ್ತು. ಇದರ ಬೆನ್ನಲ್ಲೇ ನಿಯಮಗಳಲ್ಲಿ ಬದಲಾವಣೆ ತರಲಾಗಿದೆ.
ಕೇಂದ್ರ ಲೋಕಸೇವಾ ಆಯೋಗವು ಈ ಸಾಲಿನ ನಾಗರಿಕ ಸೇವಾ ಪರೀಕ್ಷೆಯ ಅಧಿಸೂಚನೆ ಹೊರಡಿಸಿದ್ದು, ಪೂರ್ವಭಾವಿ ಪರೀಕ್ಷೆಯು ಮೇ 25ರಂದು ನಡೆಯಲಿದೆ. ಐಎಎಸ್, ಐಎಫ್‌ಎಸ್ ಮತ್ತು ಐಪಿಎಸ್ ಸೇರಿದಂತೆ ಒಟ್ಟು 979 ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಲಾಗಿದೆ.
ಅಭ್ಯರ್ಥಿಗಳು http://upsconline.gov.in ವೆಬ್‌ಸೈಟ್ ಮೂಲಕ ಫೆಬ್ರುವರಿ 11, 2025ರ ಸಂಜೆ 6ರ ಒಳಗಾಗಿ ಅರ್ಜಿ ಸಲ್ಲಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.