ನವದೆಹಲಿ: ಆರೋಪಿಯೊಬ್ಬರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಅಲಹಾಬಾದ್ ಹೈಕೋರ್ಟ್ 21 ಬಾರಿ ಮುಂದೂಡಿರುವುದಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ವೈಯಕ್ತಿಕ ಸ್ವಾತಂತ್ರ್ಯದ ಪ್ರಕರಣಗಳನ್ನು ತ್ವರಿತವಾಗಿ ತೀರ್ಮಾನಿಸಬೇಕು ಎಂದು ಶುಕ್ರವಾರ ಪುನರುಚ್ಚರಿಸಿದೆ.
‘ನಾಗರಿಕರ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ವಿಷಯಗಳನ್ನು ತ್ವರಿತವಾಗಿ ಆಲಿಸಬೇಕು ಮತ್ತು ನಿರ್ಧರಿಸಬೇಕು ಎಂದು ಪದೇ ಪದೇ ಹೇಳುತ್ತಿದ್ದೇವೆ. ಹೀಗಾಗಿ, ಪ್ರಕರಣಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ತ್ವರಿತವಾಗಿ ನಿರ್ವಹಿಸುವಂತೆ ನಾವು ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗೆ ವಿನಂತಿಸುತ್ತೇವೆ’ ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಎನ್.ವಿ. ಅಂಜಾರಿಯಾ, ಅಲೋಕ್ ಆರಾಧೆ ಅವರನ್ನೊಳಗೊಂಡ ಪೀಠವು ಹೇಳಿದೆ.
ಕುಲದೀಪ್ ಎಂಬುವವರ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಪೀಠವು ಕೈಗೆತ್ತಿಕೊಳ್ಳುತ್ತಿದ್ದಂತೆ, ‘ಹೈಕೋರ್ಟ್‌ನಲ್ಲಿ 21 ಬಾರಿ ಮುಂದೂಡಲಾಗಿದ್ದು, ಎರಡು ತಿಂಗಳ ಬಳಿಕ ಈ ಪ್ರಕರಣವನ್ನು ವಿಚಾರಣೆಗೆ ಪಟ್ಟಿ ಮಾಡಲಾಗಿದೆ’ ಎಂದು ಆರೋಪಿ ಪರ ವಕೀಲರು ಪೀಠಕ್ಕೆ ತಿಳಿಸಿದರು.
ಆರೋಪಿಯೊಬ್ಬರ ಜಾಮೀನು ಅರ್ಜಿಯನ್ನು 43 ಬಾರಿ ಮುಂದೂಡಲ್ಪಟ್ಟಿದ್ದರೂ, ಸುಪ್ರೀಂ ಕೋರ್ಟ್ ಜಾಮೀನು ನೀಡಿರುವುದನ್ನು ವಕೀಲರು ಪೀಠದ ಗಮನಕ್ಕೆ ತಂದರು. ತಕ್ಷಣವೇ ಸ್ಪಂದಿಸಿದ ಮುಖ್ಯ ನ್ಯಾಯಮೂರ್ತಿ ಅವರು, ಈ ಪ್ರಕರಣವನ್ನು ವೈಯಕ್ತಿಕವಾಗಿ ಪರಿಶೀಲಿಸುವಂತೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅವರಿಗೆ ಕೇಳಿಕೊಂಡಿರುವುದಾಗಿ ಹೇಳಿದರು.
ಈ ಪ್ರಕರಣದಲ್ಲಿ ತಕ್ಷಣವೇ ಜಾಮೀನು ಮಂಜೂರು ಮಾಡಲು ನಿರಾಕರಿಸಿದ ಪೀಠವು, ‘ಮುಂದಿನ ವಿಚಾರಣೆಯ ದಿನಾಂಕದಂದು ಹೈಕೋರ್ಟ್ ಈ ವಿಷಯವನ್ನು ಪರಿಗಣಿಸಲಿದೆ. ಅಲ್ಲಿ ಪರಿಹಾರ ದೊರಕದಿದ್ದರೆ ಅರ್ಜಿದಾರರು ಮತ್ತೆ ಸುಪ್ರೀಂ ಕೋರ್ಟ್‌ಗೆ ಬರಬಹುದು’ ಎಂದು ತಿಳಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.