ಸುಪ್ರೀಂ ಕೋರ್ಟ್
ನವದೆಹಲಿ: ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ಮಾಜಿ ಪ್ರಾಧ್ಯಾಪಕಿ ಅಮಿತಾ ಸಿಂಗ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಸಂಬಂಧ ಆನ್‌ಲೈನ್ ಸುದ್ದಿ ಪೋರ್ಟಲ್ ‘ದಿ ವೈರ್’ಗೆ ನೀಡಲಾದ ಸಮನ್ಸ್ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ‘ಮಾನನಷ್ಟ ಆರೋಪಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಅಪರಾಧದ ವ್ಯಾಪ್ತಿಯಿಂದ ಹೊರಗಿಡಬೇಕಾದ ಸಮಯ ಬಂದಿದೆ’ ಎಂದು ಸೋಮವಾರ ಹೇಳಿದೆ.
ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸಿತು.
ಅರ್ಜಿಯ ಕುರಿತು ನೋಟಿಸ್ ಜಾರಿ ಮಾಡಲು ಸಮ್ಮತಿಸಿದ ನ್ಯಾಯಮೂರ್ತಿ ಸುಂದರೇಶ್, ‘ಇದೆಲ್ಲವನ್ನೂ ಅಪರಾಧದ ವ್ಯಾಪ್ತಿಯಿಂದ ಹೊರಗಿಡುವ ಸಮಯ ಬಂದಿದೆ ಎಂದು ನಾನು ಭಾವಿಸುತ್ತೇನೆ’ ಎಂದು ಮೌಖಿಕವಾಗಿ ಹೇಳಿದರು.
ಸುದ್ದಿ ಪೋರ್ಟಲ್ ಅನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು, ನ್ಯಾಯಪೀಠದ ಅಭಿಪ್ರಾಯವನ್ನು ಒಪ್ಪಿಕೊಂಡರು.
‘ದಿ ವೈರ್’ ಅನ್ನು ನಡೆಸುತ್ತಿದ್ದ ಫೌಂಡೇಷನ್ ಫಾರ್ ಇಂಡಿಪೆಂಡೆಂಟ್ ಜರ್ನಲಿಸಂ ಸಲ್ಲಿಸಿದ್ದ ಅರ್ಜಿ ಮೇರೆಗೆ ನ್ಯಾಯಾಲಯವು ಅಮಿತಾ ಸಿಂಗ್ ಅವರಿಗೆ ನೋಟಿಸ್ ಜಾರಿ ಮಾಡಿತು. 2016ರಲ್ಲಿ ಪ್ರಕಟವಾದ ಲೇಖನಕ್ಕೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆ ಹೂಡಲಾಗಿದೆ.
ಏನಿದು ಪ್ರಕರಣ?: ಜೆಎನ್‌ಯು ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ‘ಸೆಕ್ಸ್ ದಂಧೆ’ ನಡೆಯುತ್ತಿದೆ ಎಂದು ಪ್ರೊ. ಅಮಿತಾ ಸಿಂಗ್ ಅವರನ್ನೊಳಗೊಂಡ ತಂಡವು ವಿಶ್ವವಿದ್ಯಾಲಯದ ಆಡಳಿತಕ್ಕೆ ವರದಿ ಸಲ್ಲಿಸಿದೆ ಎಂದು ಸುಳ್ಳು ಆರೋಪ ಮಾಡಿ ‘ದಿ ವೈರ್’ ಸುದ್ದಿ ಪ್ರಕಟಿಸಿದೆ ಎಂದು ಆರೋಪಿಸಿ ಸಿಂಗ್ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.