ನವದೆಹಲಿ: ಸಾರ್ವಜನಿಕ ಪರೀಕ್ಷಾ ವ್ಯವಸ್ಥೆಯನ್ನೇ ಹಾಳು ಮಾಡಿದ್ದೀರಿ ಎಂದು ಉತ್ತರ ಪ್ರದೇಶದಲ್ಲಿ ಸಿಟಿಇಟಿ ಪರೀಕ್ಷೆ ಬರೆಯಲು ಬೇರೊಬ್ಬ ವ್ಯಕ್ತಿಯನ್ನು ಕಳುಹಿಸಿದ್ದ ಪ್ರಕರಣದ ಆರೋಪಿಗೆ ಸುಪ್ರೀಂ ಕೋರ್ಟ್ ಸೋಮವಾರ ಛೀಮಾರಿ ಹಾಕಿತು.
ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರು, ಬಾಲಿವುಡ್ ಸಿನಿಮಾ ‘ಮುನ್ನಾಭಾಯಿ ಎಂಬಿಬಿಎಸ್’ ಉಲ್ಲೇಖಿಸಿ, ‘ಮುನ್ನಾಭಾಯಿ ಜೈಲಿನಲ್ಲಿಯೇ ಇರಲಿ’ ಎಂದು ಹೇಳಿದರು.
‘ನಿಮ್ಮಂಥವರಿಂದಾಗಿಯೇ ಸಾಕಷ್ಟು ಆಕಾಂಕ್ಷಿಗಳು ಕಷ್ಟ ಅನುಭವಿಸುತ್ತಿದ್ದಾರೆ’ ಎಂದು ಹೇಳಿದರು.
ಅರ್ಜಿದಾರರ ಪರ ಹಾಜರಿದ್ದ ವಕೀಲರು, ಪ್ರಕರಣದಲ್ಲಿ ಮೂವರ ವಿರುದ್ಧ ದೋಷಾರೋಪಪಟ್ಟಿ ಸಲ್ಲಿಸಲಾಗಿತ್ತು. ಈ ಪೈಕಿ ಇಬ್ಬರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ ಎಂದರು.
ಜಾಮೀನು ನಿರಾಕರಿಸಿದ್ದ ಅಲಹಾಬಾದ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನ್ಯಾಯಪೀಠ ನೋಟಿಸ್ ರವಾನಿಸಿತು. ನಂತರ ಅರ್ಜಿ ವಿಚಾರಣೆಯನ್ನು ನಾಲ್ಕು ವಾರ ಮುಂದೂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.