ಸುಪ್ರೀಂ ಕೋರ್ಟ್
ನವದೆಹಲಿ: ಕಲಬುರಗಿ ಜಿಲ್ಲೆಯ ಚಿಂಚೋಳಿಯ ಸಿದ್ದಸಿರಿ ಸಕ್ಕರೆ ಕಾರ್ಖಾನೆಯಲ್ಲಿ ಮುಂದಿನ ಏಳು ದಿನದ ಒಳಗಾಗಿ ಕಬ್ಬು ಅರೆಯುವ ಪ್ರಕ್ರಿಯೆಯನ್ನು ಆರಂಭಿಸಲು ಸೂಕ್ತ ಆದೇಶ ನೀಡುವಂತೆ ರಾಜ್ಯಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿರುವುದಾಗಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.
ಈ ವಿಷಯವನ್ನು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹಂಚಿಕೊಂಡಿರುವ ಅವರು, ‘ಈ ಆದೇಶವು ಕಬ್ಬು ಬೆಳೆಗಾರರಿಗೆ ಸಿಕ್ಕ ಜಯವಾಗಿದೆ. ಕಾರ್ಖಾನೆ ಮುಚ್ಚಿಸಲು ಯತ್ನಿಸಿದ್ದವರ ಆಟ ನಡೆಯಲಿಲ್ಲ. ಈ ಐತಿಹಾಸಿಕ ತೀರ್ಪು ರೈತ ಮತ್ತು ಕಾರ್ಮಿಕ ಸಮುದಾಯ ಹಾಗೂ ರಾಜ್ಯದ ಅತ್ಯಂತ ಹಿಂದುಳಿದ ಭಾಗವಾದ ಚಿಂಚೋಳಿ ಭಾಗದ ಆರ್ಥಿಕ ಅಭಿವೃದ್ಧಿಗೆ ನೆರವಾಗಲಿದೆ’ ಎಂದಿದ್ದಾರೆ.
ಎಥೆನಾಲ್ ಉತ್ಪಾದನೆ ವಿಚಾರದಲ್ಲಿ ನಿಯಮ ಉಲ್ಲಂಘನೆ ಆರೋಪದಲ್ಲಿ ಕಲಬುರಗಿ ಜಿಲ್ಲೆಯ ಚಿಂಚೋಳಿಯ ಸಿದ್ದಸಿರಿ ಸಕ್ಕರೆ ಕಾರ್ಖಾನೆ ಮುಚ್ಚುವಂತೆ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿತ್ತು. ನೋಟಿಸ್ ಪ್ರಶ್ನಿಸಿ ಯತ್ನಾಳ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಲಯವು ಕಾರ್ಖಾನೆ ತೆರೆಯಲು ಅನುಮತಿ ನೀಡಿತ್ತು.
ಸಕ್ಕರೆ ಕಾರ್ಖಾನೆ ತೆರೆಯಲು ಹೈಕೋರ್ಟ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮೇಲ್ಮನವಿ ಸಲ್ಲಿಸಿರುವ ಸಂಬಂಧ ಪ್ರಮಾಣಪತ್ರ ಸಲ್ಲಿಸುವಂತೆ ಕಾರ್ಖಾನೆ ಮಾಲೀಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಸುಪ್ರೀಂ ಕೋರ್ಟ್ ಈ ಹಿಂದೆ ಸೂಚಿಸಿತ್ತು.
ಮಂಗಳವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಪೀಠವು ಕೇಂದ್ರ ಅರಣ್ಯ, ಪರಿಸರ ಹಾಗೂ ತಾಪಮಾನ ಬದಲಾವಣೆ ಸಚಿವಾಲಯವನ್ನು ಪ್ರತಿವಾದಿಯನ್ನಾಗಿ ಸೇರ್ಪಡೆಗೊಳಿಸಲು ಸೂಚಿಸಿತ್ತು. ಬಳಿಕ ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.