ADVERTISEMENT

I-PAC Raids: ಮಮತಾ ಬ್ಯಾನರ್ಜಿ, ಪ.ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಪಿಟಿಐ
Published 15 ಜನವರಿ 2026, 10:25 IST
Last Updated 15 ಜನವರಿ 2026, 10:25 IST
<div class="paragraphs"><p>ಮಮತಾ ಬ್ಯಾನರ್ಜಿ, ಸುಪ್ರೀಂ ಕೋರ್ಟ್</p></div>

ಮಮತಾ ಬ್ಯಾನರ್ಜಿ, ಸುಪ್ರೀಂ ಕೋರ್ಟ್

   

(ಪಿಟಿಐ ಚಿತ್ರಗಳು)

ನವದೆಹಲಿ: ಐ-ಪ್ಯಾಕ್ ಕಚೇರಿ ಮತ್ತು ಅದರ ನಿರ್ದೇಶಕರ ನಿವಾಸದ ಮೇಲೆ ಇ.ಡಿ ದಾಳಿ ನಡೆಸಿದ ಸಂದರ್ಭದಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಪಶ್ಚಿಮ ಬಂಗಾಳದ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಇಂದು (ಗುರುವಾರ) ನೋಟಿಸ್ ಜಾರಿಗೊಳಿಸಿದೆ.

ADVERTISEMENT

ಇ.ಡಿ ತನಿಖೆಗೆ ಅಡ್ಡಿಪಡಿಸಿರುವುದು ತುಂಬಾ ಗಂಭೀರ ಎಂದು ಪರಿಗಣಿಸಿರುವ ಸುಪ್ರೀಂ ಕೋರ್ಟ್, ರಾಜ್ಯ ಸರ್ಕಾರ ಹಸ್ತಕ್ಷೇಪ ನಡೆಸಬಹುದೇ ಎಂಬುದರ ಕುರಿತು ಪರಿಶೀಲನೆ ನಡೆಸುವುದಾಗಿ ಒಪ್ಪಿಕೊಂಡಿದೆ.

ಇದೇ ಸಂದರ್ಭದಲ್ಲಿ ಪಶ್ಚಿಮ ಬಂಗಾಳದಲ್ಲಿ ಇ.ಡಿ ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಅಲ್ಲದೆ ಸಿಸಿಟಿವಿ ದೃಶ್ಯಗಳನ್ನು ನಾಶಪಡಿಸದಂತೆ ಪೊಲೀಸರಿಗೆ ನಿರ್ದೇಶನ ನೀಡಿದೆ.

ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 8ರಂದು ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್ ಕಚೇರಿ ಮತ್ತು ಅದರ ನಿರ್ದೇಶಕ ಪ್ರತೀಕ್ ಜೈನ್ ಮೇಲೆ ಇ.ಡಿ ದಾಳಿ ನಡೆಸಿತ್ತು. ಈ ಸಂದರ್ಭದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸ್ಥಳಕ್ಕೆ ಬಂದು ಕಡತಗಳನ್ನು ವಶಕ್ಕೆ ಪಡೆದಿದ್ದರು ಎಂದು ಆರೋಪಿಸಲಾಗಿದೆ.

ಸಿಬಿಐ ವಿಚಾರಣೆ ಕೋರಿ ಸುಪ್ರೀಂ ಕೋರ್ಟ್‌ಗೆ ಇ.ಡಿ ಅರ್ಜಿ ಸಲ್ಲಿಸಿತ್ತು. ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಹಾಗೂ ವಿಪುಲ್ ಪಂಚೋಲಿ ಒಳಗೊಂಡ ಪೀಠವು ಅರ್ಜಿಗಳ ವಿಚಾರಣೆ ನಡೆಸಿತು.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳ ಸರ್ಕಾರ, ಡಿಜಿಪಿ ರಾಜೀವ್ ಕುಮಾರ್ ಮತ್ತು ರಾಜ್ಯದ ಉನ್ನತ ಪೊಲೀಸ್ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.

ನೆಲದ ಕಾನೂನಿನ ಪಾಲನೆ, ತನಿಖಾ ಸಂಸ್ಥೆಗಳಿಗೆ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಅನುವು ಮಾಡುವುದು, ಅಪರಾಧಿಗಳಿಗೆ ರಕ್ಷಣೆ ನೀಡುವುದನ್ನು ತಪ್ಪಿಸುವ ಉದ್ದೇಶದಿಂದ ಪ್ರಕರಣದ ವಿಚಾರಣೆ ನಡೆಸುವುದು ಅನಿವಾರ್ಯ ಎಂದಿದೆ.

ಪ್ರಕರಣದ ಕುರಿತು ಮುಂದಿನ ವಿಚಾರಣೆಯನ್ನು ಫೆಬ್ರುವರಿ 3ಕ್ಕೆ ಮುಂದೂಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.