ನವದೆಹಲಿ: ಅತ್ಯಾಚಾರ ಸಂತ್ರಸ್ತೆಯೊಬ್ಬರನ್ನು ಭಾಗಶಃ ವಿಚಾರಣೆ ನಡೆಸಿದ ಬಳಿಕ ವಿಚಾರಣೆಯನ್ನು ನಾಲ್ಕು ತಿಂಗಳು ಮುಂದೂಡಿರುವ ಪಶ್ಚಿಮ ಬಂಗಾಳದ ವಿಚಾರಣಾ ನ್ಯಾಯಾಲಯವೊಂದರ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ವಿಚಾರಣಾ ನ್ಯಾಯಾಲಯ ಮತ್ತು ಪ್ರಕರಣದ ತನಿಖೆ ನಡೆಸಿದ ಸಿಬಿಐ ಈ ಬಗ್ಗೆ ಸ್ಪಷ್ಟನೆ ನೀಡುವಂತೆ ನ್ಯಾಯಮೂರ್ತಿ ಜೆ.ಬಿ ಪಾರ್ದೀವಾಲಾ ಮತ್ತು ಕೆ.ವಿ ವಿಶ್ವನಾಥನ್ ಅವರಿದ್ದ ಪೀಠವು ನಿರ್ದೇಶನ ನೀಡಿದೆ.
‘ಸಂತ್ರಸ್ತೆಯು ಈಗಾಗಲೇ ಸಾಕ್ಷಿದಾರರಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಅವರ ಭಾಗಶಃ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ವಿಚಾರಣೆಯನ್ನು ಡಿಸೆಂಬರ್ 18ಕ್ಕೆ ಮುಂದೂಡಲಾಗಿದೆ. ಸಂತ್ರಸ್ತೆಯೇ ಸಾಕ್ಷಿದಾರರಾಗಿರುವಾಗ ಅವರ ವಿಚಾರಣೆಯನ್ನು ಬಿಡಿಬಿಡಿಯಾಗಿ ಯಾಕೆ ನಡೆಸಲಾಗುತ್ತಿದೆ ಎನ್ನುವುದು ನಮಗೆ ಅರ್ಥವಾಗುತ್ತಿಲ್ಲ’ ಎಂದು ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ.
‘ವಿಚಾರಣೆಯನ್ನು ದೀರ್ಘಾವಧಿಗೆ ಮುಂದೂಡುವ ಮೂಲಕ ಆರೋಪಿಗಳು ಸಾಕ್ಷ್ಯಗಳನ್ನು ನಾಶಪಡಿಸಲು ವಿಚಾರಣಾ ನ್ಯಾಯಾಲಯವು ಅವಕಾಶ ಕಲ್ಪಿಸಿದೆ. ಇದು ಗಂಭೀರ ಪ್ರಕರಣವಾಗಿದ್ದು, ಇದನ್ನು ನಿರ್ಲಕ್ಷಿಸುವಂತಿಲ್ಲ’ ಎಂದು ನ್ಯಾಯಪೀಠ ಹೇಳಿದೆ.
‘ಸಿಬಿಐ, ಅದರಲ್ಲೂ ಮುಖ್ಯವಾಗಿ ಸರ್ಕಾರಿ ವಕೀಲರು ಈ ಬಗ್ಗೆ ಉತ್ತರಿಸಬೇಕು ನೀಡಬೇಕು’ ಎಂದು ನ್ಯಾಯಪೀಠ ಸೂಚಿಸಿದೆ.
ಅತ್ಯಾಚಾರ ಪ್ರಕರಣದ ಆರೋಪಿಗೆ ಜಾಮೀನು ನೀಡಿರುವ ಕಲ್ಕತ್ತ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಬಗ್ಗೆ ನ್ಯಾಯಪೀಠ ವಿಚಾರಣೆ ನಡೆಸುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.