ADVERTISEMENT

ನರ್ಸ್‌ ಮರಣದಂಡನೆ ಪ್ರಕರಣ: ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ

ಪಿಟಿಐ
Published 10 ಜುಲೈ 2025, 7:05 IST
Last Updated 10 ಜುಲೈ 2025, 7:05 IST
   

ನವದೆಹಲಿ: ಯೆಮೆನ್‌ನಲ್ಲಿ ಮರಣದಂಡನೆಗೆ ಗುರಿಯಾಗಿರುವ ಕೇರಳದ ನರ್ಸ್‌ ನಿಮಿಷಾ ಪ್ರಿಯಾ ಅವರನ್ನು ರಕ್ಷಿಸಲು ರಾಜತಾಂತ್ರಿಕ ಮಾರ್ಗಗಳನ್ನು ಬಳಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಕೆಯಾದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ.

ನಿಮಿಷಾ ಅವರನ್ನು ಜುಲೈ 16ರಂದು ಗಲ್ಲಿಗೇರಿಸಲು ನಿರ್ಧರಿಸಲಾಗಿದೆ ಎಂದು ಅಲ್ಲಿನ ಜೈಲು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಗಲ್ಲು ಶಿಕ್ಷೆ ದಿನಾಂಕ ನಿಗದಿಯಾಗಿದ್ದರಿಂದ ಆದಷ್ಟು ಬೇಗ ರಾಜತಾಂತ್ರಿಕ ಮಾರ್ಗಗಳನ್ನು ಅನ್ವೇಷಿಸುವ ಅಗತ್ಯವಿದೆ ಎಂದು ವಕೀಲ ಸುಭಾಷ್ ಚಂದ್ರನ್ ಕೆ.ಆರ್ ಅವರು ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠಕ್ಕೆ ತಿಳಿಸಿದರು.‌‌‌

ADVERTISEMENT

ಬ್ಲಡ್ ಮನಿಯನ್ನು (ಸಾವಿಗೆ ಪ್ರತಿಯಾಗಿ ಹಣ ರೂಪದಲ್ಲಿ ನೀಡುವ ಪರಿಹಾರ) ನೀಡಲು ಸಾಧ್ಯವಾದರೆ, ಮೃತರ ಕುಟುಂಬವು ನಿಮಿಷಾ ಅವರಿಗೆ ಕ್ಷಮೆ ನೀಡಬಹುದು ಎಂದು ಪೀಠದ ಗಮನಕ್ಕೆ ತಂದರು.

ಜುಲೈ 14ರಂದು ವಿಚಾರಣೆ ನಡೆಸುವುದಾಗಿ ಪೀಠ ತಿಳಿಸಿದೆ.

ಯೆಮೆನ್‌ ಪ್ರಜೆಯೊಬ್ಬರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಕೇರಳದ ಪಾಲಕ್ಕಾಡ್‌ ಜಿಲ್ಲೆಯವರಾದ ನಿಮಿಷಾ ಅವರಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. 2017ರಿಂದ ನಿಮಿಷ ಅವರು ಯೆಮನ್‌ನ ರಾಜಧಾನಿ ಸನಾದ ಜೈಲಿನಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.