
ನವದೆಹಲಿ: ವಂಚನೆ ಹಾಗೂ ಫೋರ್ಜರಿ ಪ್ರಕರಣದಲ್ಲಿ ಮಾಜಿ ಸಚಿವ, ಎನ್‌ಸಿಪಿ ಶಾಸಕ ಮಾಣಿಕರಾವ್ ಕೊಕಾಟೆ ಅವರಿಗೆ ನೀಡಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಇದರಿಂದ, ಶಾಸಕ ಸ್ಥಾನದಿಂದ ಅನರ್ಹಗೊಳ್ಳುವುದರಿಂದ ಅವರು ಸದ್ಯ ಪಾರಾಗಿದ್ದಾರೆ.
ಕೊಕಾಟೆ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್‌ಮಾಲ್ಯ ಬಾಗ್ಚಿ ಅವರಿದ್ದ ಪೀಠವು ಮಹಾರಾಷ್ಟ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತು.
ಕೊಕಾಟೆ ಪರ ವಕೀಲರ ವಾದ ಆಲಿಸಿದ ಪೀಠ, ‘ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ. ಅದೇ ವೇಳೆ, ಅರ್ಜಿದಾರರ ಶಿಕ್ಷೆಗೆ ತಡೆ ನೀಡಲಾಗಿದೆ. ಆದರೆ ಅವರು ಯಾವುದೇ ಲಾಭದಾಯಕ ಹುದ್ದೆ ಹೊಂದುವಂತಿಲ್ಲ’ ಎಂದಿತು.
ರಾಜ್ಯ ಸರ್ಕಾರದ ವಸತಿ ಯೋಜನೆಯೊಂದರಲ್ಲಿ 1995ರಲ್ಲಿ ನಡೆಸಿದ ವಂಚನೆ ಪ್ರಕರಣದಲ್ಲಿ ಕೊಕಾಟೆ ಅವರಿಗೆ ನಾಸಿಕ್ ನ್ಯಾಯಾಲಯವು ಈ ವರ್ಷದ ಫೆಬ್ರುವರಿಯಲ್ಲಿ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಡಿಸೆಂಬರ್ 19ರಂದು ಬಾಂಬೆ ಹೈಕೋರ್ಟ್ ಕೊಕಾಟೆ ಅವರ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಿತ್ತು. ಆದರೆ ಅವರನ್ನು ಅಪರಾಧಿ ಎಂದು ನಿರ್ಣಯಿಸಿದ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ನಿರಾಕರಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.