ADVERTISEMENT

ಗುಜರಾತ್ ದುರಂತ: ಸುಪ್ರೀಂ ಮೇಲ್ವಿಚಾರಣೆಯಲ್ಲಿ ತನಿಖೆಗೆ ಮನವಿ, ವಿಚಾರಣೆಗೆ ಸಮ್ಮತಿ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2022, 6:54 IST
Last Updated 1 ನವೆಂಬರ್ 2022, 6:54 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌   

ನವದೆಹಲಿ: ಗುಜರಾತ್‌ನ ಮೊರ್ಬಿಯಲ್ಲಿ ಸಂಭವಿಸಿರುವ ತೂಗುಸೇತುವೆ ದುರಂತಕ್ಕೆಸಂಬಂಧಿಸಿದಂತೆ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ನ್ಯಾಯಾಂಗ ತನಿಖೆ ನಡೆಯಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಸಮ್ಮತಿಸಿದೆ.

ಮೊರ್ಬಿ ತೂಗುಸೇತುವೆ ಮುರಿದುಬಿದ್ದ ಪ್ರಕರಣದ ವಿಚಾರಣೆ ಪ್ರಾರಂಭಿಸಲುಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳ ಮೇಲ್ವಿಚಾರಣೆಯಲ್ಲಿ ನ್ಯಾಯಾಂಗ ಸಮಿತಿಯನ್ನು ರಚಿಸುವಂತೆ ನಿರ್ದೇಶನ ನೀಡಬೇಕು ಎಂದು ಕೋರಿವಕೀಲ ವಿಶಾಲ್‌ ತಿವಾರಿ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆಯನ್ನುನ್ಯಾಯಾಲಯವುನವೆಂಬರ್‌ 14ರಂದು ಕೈಗೆತ್ತಿಕೊಳ್ಳಲಿದೆ.

ADVERTISEMENT

ಪಶ್ಚಿಮ ಗುಜರಾತ್‌ನ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಶತಮಾನದಷ್ಟು ಹಳೆಯ ತೂಗುಸೇತುವೆ ಭಾನುವಾರ (ಅಕ್ಟೋಬರ್‌ 30 ರಂದು) ಸಂಜೆ ಮುರಿದು ಬಿದ್ದಿತ್ತು.ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 136ಕ್ಕೆ ಏರಿಕೆಯಾಗಿದೆ. ನಾಪತ್ತೆಯಾಗಿರುವವರ ಶೋಧಕಾರ್ಯ ಮುಂದುವರಿದಿದೆ.

ಈ ಸಂಬಂಧ ಮೊರ್ಬಿ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದು, ಒಂಬತ್ತು ಮಂದಿಯನ್ನು ಬಂಧಿಸಿದ್ದಾರೆ. ರಾಜ್ಯ ಸರ್ಕಾರವೂ ತನಿಖಾ ತಂಡವನ್ನು ರಚಿಸಿದೆ.

ಈವರೆಗೆ ಒಟ್ಟು 136 ಶವಗಳನ್ನು ನದಿಯಿಂದ ಹೊರತೆಗೆಯಲಾಗಿದೆ. ಮೃತರಲ್ಲಿ 50 ಮಕ್ಕಳು ಮತ್ತು 40 ಮಹಿಳೆಯರು ಸೇರಿದ್ದಾರೆ. ಒಟ್ಟು 170 ಜನರನ್ನು ರಕ್ಷಿಸಲಾಗಿದೆ. ಅವರಿಗೆ ಮೊರ್ಬಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಚೇತರಿಸಿಕೊಂಡ ಹಲವರು ಮನೆಗೆ ಮರಳಿದ್ದಾರೆ. ಅವಘಡದಲ್ಲಿ ಇನ್ನೂ ಎಷ್ಟು ಮಂದಿ ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಿಲ್ಲ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮೊರ್ಬಿ ಜಿಲ್ಲಾಡಳಿತ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.