ADVERTISEMENT

ಬಿಲ್ಕಿಸ್‌ ಬಾನು ಅತ್ಯಾಚಾರಿಗಳ ಬಿಡುಗಡೆ: ಸುಪ್ರೀಂ ಕೋರ್ಟ್‌ನಲ್ಲಿ ಇಂದು ವಿಚಾರಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ಆಗಸ್ಟ್ 2022, 2:00 IST
Last Updated 25 ಆಗಸ್ಟ್ 2022, 2:00 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌   

ನವದೆಹಲಿ: ಬಿಲ್ಕಿಸ್‌ ಬಾನು ಅತ್ಯಾಚಾರ ಪ್ರಕರಣದ 11 ಅಪರಾಧಿಗಳ ಬಿಡುಗಡೆ ಕ್ರಮವನ್ನು ರದ್ದುಪಡಿಸಬೇಕೆಂದು ಆಗ್ರಹಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಇಂದು ನಡೆಸಲಿದೆ.

ಬಿಲ್ಕಿಸ್‌ ಬಾನು ಮೇಲೆ ಅತ್ಯಾಚಾರ ಮತ್ತು ಅವರ ಕುಟುಂಬದ 7 ಮಂದಿಯ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ 11 ಮಂದಿ ಕೈದಿಗಳಿಗೆ ಗುಜರಾತ್‌ ಸರ್ಕಾರವು ಸ್ವಾತಂತ್ರ್ಯದ ಅಮೃತ ಮಹೋತ್ಸವದ ದಿನದಂದು ಶಿಕ್ಷೆ ಅವಧಿ ಕಡಿತಗೊಳಿಸಿ, ಬಿಡುಗಡೆ ಮಾಡಿತ್ತು.

ಬಿಲ್ಕಿಸ್‌ ಬಾನು ಮೇಲೆ 2002ರ ಗೋಧ್ರಾ ಹತ್ಯಾಕಾಂಡದ ನಂತರದಲ್ಲಿ 11 ಮಂದಿ ಅತ್ಯಾಚಾರ ನಡೆಸಿದ್ದರು. ಈ ಸಂದರ್ಭದಲ್ಲಿ ಅವರು 5 ತಿಂಗಳ ಗರ್ಭಿಣಿ ಆಗಿದ್ದರು. ಅಪರಾಧಿಗಳನ್ನು ಸ್ವಾಂತಂತ್ರ್ಯದ ದಿನವೇ ಬಿಡುಗಡೆ ಮಾಡಿರುವ ಗುಜರಾತ್‌ ಸರ್ಕಾರದ ಕ್ರಮವನ್ನು ವಿರೋಧ ಪಕ್ಷಗಳು, ಸಾಮಾಜಿಕ ಕಾರ್ಯಕರ್ತರು ಖಂಡಿಸಿದ್ದಾರೆ.

ADVERTISEMENT

ಅಪರಾಧಿಗಳಿಗೆ ಕ್ಷಮಾದಾನ ನೀಡಿದ ಗುಜರಾತ್ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಮಾಜಿ ಸಂಸದೆ ಸುಭಾಷಿಣಿ ಅಲಿ, ಪತ್ರಕರ್ತೆ ರೇವತಿ ಲಾಲ್ ಮತ್ತು ಪ್ರೊ.ರೂಪ ರೇಖಾ ವರ್ಮಾ ಅವರು ಸಲ್ಲಿಸಿರುವ ಜಂಟಿ ಅರ್ಜಿಯ ವಿಚಾರಣೆಯನ್ನು ಇಂದು(ಗುರುವಾರ) ಸುಪ್ರೀಂ ಕೋರ್ಟ್‌ ನಡೆಸಲಿದೆ.

ಈ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಆರೋಪದ ಮೇಲೆ 11 ಮಂದಿಗೆ 2008ರ ಜ.21 ಮುಂಬೈ ವಿಶೇಷ ಸಿಬಿಐ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. ನಂತರ ಅವರ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಎತ್ತಿ ಹಿಡಿದಿತ್ತು.

ಪೆಗಾಸಸ್‌ ಕುತಂತ್ರಾಂಶ ಬಳಸಿ, ಗೂಢಚಾರಿಕೆ ನಡೆಸಿದ ಆರೋಪಗಳ ಕುರಿತು ಸ್ವತಂತ್ರ ತನಿಖೆ ನಡೆಸುವಂತೆ ಆಗ್ರಹಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನೂ ಸುಪ್ರೀಂ ಕೋರ್ಟ್‌ ಇಂದು ನಡೆಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.