ನವದೆಹಲಿ: ಪರಿಸರಕ್ಕೆ ಆಗಿರುವ ಹಾನಿಯನ್ನು ಸರಿಪಡಿಸುವಂತೆ ಮತ್ತು ಪರಿಹಾರ ನೀಡುವಂತೆ ಸೂಚಿಸುವ ಅಧಿಕಾರ ಮಾಲಿನ್ಯ ನಿಯಂತ್ರಣ ಮಂಡಳಿಗಳಿಗೆ ಇದೆ ಎಂಬ ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ್ ನೀಡಿದೆ.
ಮಾಲಿನ್ಯ ನಿಯಂತ್ರಣ ಮಂಡಳಿಗಳು ಜಲ ಕಾಯ್ದೆ ಮತ್ತು ವಾಯು ಕಾಯ್ದೆಯ ನಿಯಮಗಳ ಅಡಿಯಲ್ಲಿ ಸಾಂವಿಧಾನಿಕವಾಗಿ ಹಾಗೂ ಶಾಸನಬದ್ಧವಾಗಿ ಈ ಅಧಿಕಾರ ಹೊಂದಿವೆ ಎಂದು ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ ಸೋಮವಾರ ಅಭಿಪ್ರಾಯಪಟ್ಟಿದೆ.
‘ಪರಿಸರ ಸಂರಕ್ಷಣೆಗೆ ಸಂಬಂಧಿಸಿದಂತೆ ಭಾರತದಲ್ಲಿರುವ ಕಾನೂನುಗಳನ್ನು ನಿಯಂತ್ರಿಸುವ ತತ್ವಗಳನ್ನು ಪರಿಗಣಿಸಿದ ನಂತರ ಈ ತೀರ್ಪು ನೀಡಿದ್ದೇವೆ. ಪರಿಸರಕ್ಕೆ ಉಂಟಾಗಿರುವ ಹಾನಿಗೆ ಪರಿಹಾರ ನೀಡುವಂತೆ ಮತ್ತು ಸಂಭಾವ್ಯ ಪರಿಸರ ಹಾನಿಯನ್ನು ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮವಾಗಿ ನಿರ್ದಿಷ್ಟ ಮೊತ್ತದ ಬ್ಯಾಂಕ್ ಗ್ಯಾರಂಟಿ ನೀಡುವಂತೆ ಸೂಚಿಸುವ ಅಧಿಕಾರವನ್ನು ಮಾಲಿನ್ಯ ನಿಯಂತ್ರಣ ಮಂಡಳಿಗಳು ಹೊಂದಿವೆ’ ಎಂದು ಪೀಠ ತಿಳಿಸಿದೆ.
ಆದರೆ ಇದು ಶಿಕ್ಷೆಯ ರೂಪದಲ್ಲಿ ದಂಡ ವಿಧಿಸುವುದಕ್ಕಿಂತ ಭಿನ್ನವಾಗಿದೆ ಎಂದು ಪೀಠವು ಸ್ಪಷ್ಟಪಡಿಸಿತು. ನಿಯಮ ಉಲ್ಲಂಘಿಸುವವರನ್ನು ಶಿಕ್ಷಿಸುವ ಬದಲು, ಪರಿಸರಕ್ಕೆ ಆಗಿರುವ ಹಾನಿಯನ್ನು ಸರಿಪಡಿಸುವ ಅಥವಾ ಹಾನಿಯಾಗದಂತೆ ತಡೆಯುವ ಉದ್ದೇಶವನ್ನು ಇದು ಹೊಂದಿದೆ ಎಂದು ಹೇಳಿತು.
ಮಾಲಿನ್ಯ ನಿಯಂತ್ರಣ ಮಂಡಳಿಗಳು ಪರಿಸರ ಹಾನಿಗೆ ಸಂಬಂಧಿಸಿದಂತೆ ಪರಿಹಾರ ಕೋರುವ ಅಧಿಕಾರವನ್ನು ಮೊಟಕುಗೊಳಿಸಿ ದೆಹಲಿ ಹೈಕೋರ್ಟ್ 2012ರಲ್ಲಿ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.