ADVERTISEMENT

ಆರೋಪಿಗೆ ಜಾಮೀನು: ಹೈಕೋರ್ಟ್‌ ಆದೇಶಕ್ಕೆ ‘ಸುಪ್ರೀಂ‘ ಅಸಮಾಧಾನ

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2021, 19:32 IST
Last Updated 23 ಫೆಬ್ರುವರಿ 2021, 19:32 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ದ್ವಿತೀಯ ಪಿಯುಸಿ ಹಾಗೂ ಪೊಲೀಸ್‌ ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಆರೋಪಿಗೆ ರಾಜ್ಯ ಹೈಕೋರ್ಟ್‌ ಜಾಮೀನು ನೀಡಿದ್ದರ ಬಗ್ಗೆ ಸುಪ್ರೀಂ ಕೋರ್ಟ್ ಮಂಗಳವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

2016 ಹಾಗೂ 2019ರಲ್ಲಿ ನಡೆದಿದ್ದ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಆರೋಪಿ ಶಿವಕುಮಾರಯ್ಯ ಅಲಿಯಾಸ್ ಗುರೂಜಿಗೆ 2020ರ ಫೆಬ್ರವರಿ 28ರಂದು ರಾಜ್ಯ ಹೈಕೋರ್ಟ್ ಜಾಮೀನು ನೀಡಿತ್ತು. ಈ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್‌.ಎ. ಬೊಬಡೆ ನೇತೃತ್ವದ ಪೀಠವು ಹೈಕೋರ್ಟ್‌ ಆದೇಶಕ್ಕೆ ಸಂಬಂಧಿಸಿದಂತೆ ಖಾರವಾಗಿ ಪ್ರತಿಕ್ರಿಯಿಸಿದೆ.

‘ಮಧ್ಯಪ್ರದೇಶದಲ್ಲಿ ನಡೆದ ವ್ಯಾಪಂ ಹಗರಣದಲ್ಲಿ ಏನಾಯಿತು ಎಂಬುದು ನಮಗೆ ಗೊತ್ತು. ಬಿಹಾರದಲ್ಲಿ ಏನಾಯಿತು ಎಂಬುದೂ ಗೊತ್ತು. ದೇಶದಲ್ಲಿ ಶೈಕ್ಷಣಿಕ ವ್ಯವಸ್ಥೆಯನ್ನು ವಿರೂಪಗೊಳಿಸಿರುವ ಅನೇಕ ಪ್ರಕರಣಗಳ ವಿಚಾರಣೆ ನಡೆಯುತ್ತಿದೆ. ಈ ಕುರಿತು ನಾವು ಸ್ಪಷ್ಟ ಸಂದೇಶ ರವಾನಿಸುತ್ತಿದ್ದೇವೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ADVERTISEMENT

ಆರೋಪಿಗೆ ನೋಟಿಸ್‌ ಜಾರಿ ಮಾಡಿರುವ ಪೀಠ, ಜಾಮೀನು ಷರತ್ತು ಉಲ್ಲಂಘಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.

ಆರೋಪಿ ಶಿವಕುಮಾರಯ್ಯ ಪದೇಪದೇ ಅಕ್ರಮದಲ್ಲಿ ಭಾಗಿಯಾಗುತ್ತ ಜಾಮೀನಿನ ಷರತ್ತನ್ನು ಉಲ್ಲಂಘಿಸಿದ್ದು, ಅವರಿಗೆ ನೀಡಲಾದ ಜಾಮೀನು ರದ್ದುಪಡಿಸಬೇಕು ಎಂದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ತಳ್ಳಿ ಹಾಕಿತ್ತು.

ದ್ವಿತೀಯ ಪಿಯುಸಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಸಹ ಆರೋಪಿ ಓಬಳರಾಜು ವಿರುದ್ಧ ವಿಚಾರಣಾಧೀನ ನ್ಯಾಯಾಲಯ ಹೊರಡಿಸಿದ್ದ ಅಪರಾಧ ಸಂಚಿನ ಆದೇಶವನ್ನು ರದ್ದುಪಡಿಸಿ 2019ರ ಸೆಪ್ಟೆಂಬರ್‌ 13ರಂದು ಹೈಕೋರ್ಟ್‌ ನೀಡಿದ್ದ ಆದೇಶಕ್ಕೂ ಇದೇ ವೇಳೆ ನ್ಯಾಯಪೀಠ ತಡೆ ನೀಡಿದೆ.

ದ್ವಿತೀಯ ಪಿಯುಸಿ ರಸಾಯನ ವಿಜ್ಞಾನ ವಿಷಯದ ಪ್ರಶ್ನೆಪತ್ರಿಕೆ ಸೋರಿಕೆ ಆಗಿದ್ದರ ಕುರಿತು ಬೆಂಗಳೂರಿನ ಮಲ್ಲೇಶ್ವರಂ ಪೊಲೀಸ್‌ ಠಾಣೆಯಲ್ಲಿ 2016ರ ಮಾರ್ಚ್‌ 22ರಂದು ಪ್ರಕರಣ ದಾಖಲಾಗಿತ್ತು. ಪರೀಕ್ಷೆಯನ್ನು ಮುಂದೂಡಿದ್ದರೂ ಮತ್ತೆ ಪ್ರಶ್ನೆ ಪತ್ರಿಕೆ ಬಹಿರಂಗಗೊಂಡಿದ್ದರಿಂದ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿತ್ತು. ತನಿಖೆ ನಡೆಸಿದ್ದ ಸಿಐಡಿ 18 ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.