
ಸುರೇಶ್ ಕಲ್ಮಾಡಿ
ಪಿಟಿಐ
ಪುಣೆ: ಕಾಂಗ್ರೆಸ್ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಸುರೇಶ್ ಕಲ್ಮಾಡಿ ಮಂಗಳವಾರ ಪುಣೆಯಲ್ಲಿ ನಿಧನರಾದರು.
ಸುರೇಶ್ ಕಲ್ಮಾಡಿ (81) ಅವರು ಕರ್ನಾಟಕದ ಉಡುಪಿ ಜಿಲ್ಲೆಯ ಕಲ್ಮಾಡಿ ಮೂಲದವರು. ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳವಾರ ನಿಧನರಾದರು ಎಂದು ಅವರ ಕುಟುಂಬದ ಮೂಲಗಳು ಮಾಹಿತಿ ನೀಡಿವೆ.
ರಾಜಕೀಯ ಜೀವನದಲ್ಲಿ ಹಲವು ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದ ಸುರೇಶ್ ಅವರು ರೈಲ್ವೆ ರಾಜ್ಯ ಖಾತೆಯ ಸಚಿವರಾಗಿ ಮತ್ತು ಭಾರತೀಯ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
ಕಲ್ಮಾಡಿ ಅವರು ರಾಜಕೀಯ ಪ್ರವೇಶಿಸುವ ಮೊದಲು ಹತ್ತು ವರ್ಷ ಭಾರತೀಯ ವಾಯಪಡೆಯಲ್ಲಿ ಪೈಲಟ್ ಆಗಿ ಕಾರ್ಯನಿರ್ವಹಿಸಿದ್ದರು. ನಿವೃತ್ತಿಯ ಬಳಿಕ ಎನ್‌ಸಿಪಿ ನಾಯಕ ಶರದ್ ಪವಾರ್ ಒಡನಾಟದಿಂದಾಗಿ ರಾಜಕೀಯ ಪ್ರವೇಶಿಸಿದರು. ಕಾಂಗ್ರೆಸ್‌ನಿಂದ ನಾಲ್ಕು ಬಾರಿ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅವರು 1995–1996ರಲ್ಲಿ ಕೇಂದ್ರದ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಬಳಿಕ ಮೂರು ಬಾರಿ ಲೋಕಸಭೆ ಸದಸ್ಯರಾಗಿದ್ದರು.
ಸುದೀರ್ಘ ಅವಧಿಗೆ ಕ್ರೀಡಾ ಆಡಳಿತಗಾರರಾಗಿ ಕಾರ್ಯನಿರ್ವಹಿಸಿದ ಅವರು ಈ ಮೂಲಕ ಕೀರ್ತಿ ಮತ್ತು ಅಪಕೀರ್ತಿ ಎರಡನ್ನೂ ಗಳಿಸಿದ್ದರು. 1989ರಿಂದ 2013ರವರೆಗೆ ಭಾರತೀಯ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷ ಹುದ್ದೆಯನ್ನು ನಿರ್ವಹಿಸಿ, ಹಲವಾರು ಸುಧಾರಣೆಗಳನ್ನು ತಂದಿದ್ದರು. 2003ರಲ್ಲಿ ಆಫ್ರೋ ಏಷ್ಯನ್ ಗೇಮ್ಸ್, 2008ರಲ್ಲಿ ಕಾಮನ್‌ವೆಲ್ತ್ ಯೂತ್ ಗೇಮ್ಸ್, 2010ರಲ್ಲಿ ಕಾಮನ್‌ವೆಲ್ತ್ ಗೇಮ್ಸ್ ಸೇರಿದಂತೆ ಹಲವು ಕ್ರೀಡಾಕೂಟಗಳು ಭಾರತದಲ್ಲಿ ನಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
2010ರಲ್ಲಿ ನಡೆದಿದ್ದ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭ್ರಷ್ಟಾಚಾರ ನಡೆಸಿದ ಆರೋಪದಡಿ ಸುರೇಶ್ ಅವರನ್ನು ಬಂಧಿಸಲಾಗಿತ್ತು. ಬಳಿಕ ಜಾರಿ ನಿರ್ದೇಶನಾಲಯವು(ಇ.ಡಿ) ಅವರನ್ನು ದೋಷಮುಕ್ತಗೊಳಿಸಿ ವರದಿ ಸಲ್ಲಿಸಿತ್ತು.
ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾ(ಎಎಫ್‌ಐ), ಏಷ್ಯನ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಸೇರಿದಂತೆ ಪ್ರಮುಖ ಕ್ರೀಡಾ ಸಂಸ್ಥೆಗಳ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. 2001ರಿಂದ 2013ರವರೆಗೆ ಸುರೇಶ್ ಅವರು ವಿಶ್ವ ಅಥ್ಲೆಟಿಕ್ಸ್ ಮಂಡಳಿಯ ಸದಸ್ಯತ್ವ ಪಡೆಯುವ ಮೂಲಕ ಈ ಸದಸ್ಯತ್ವ ಪಡೆದ ಮೊದಲ ಭಾರತೀಯ ಎನಿಸಿಕೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.