ADVERTISEMENT

ಗಲಭೆಗೆ ಪಿತೂರಿ ಪ್ರಕರಣ ರದ್ದತಿ ಕೋರಿ ಸ್ವಪ್ನ ಸುರೇಶ್ ಕೇರಳ ಹೈಕೋರ್ಟ್ ಮೊರೆ

ಪಿಟಿಐ
Published 13 ಜೂನ್ 2022, 14:12 IST
Last Updated 13 ಜೂನ್ 2022, 14:12 IST
   

ಕೊಚ್ಚಿ : ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಮುಖ್ಯಮಂತ್ರಿ ಸಹಿತ ಇತರ ಹಲವರು ಕೃತ್ಯದಲ್ಲಿ ಶಾಮೀಲಾಗಿದ್ದಾರೆ ಎಂಬ ತಮ್ಮ ಇತ್ತೀಚಿನ ಹೇಳಿಕೆಯನ್ನೇ ಮುಂದಿಟ್ಟುಕೊಂಡು ರಾಜ್ಯದಲ್ಲಿ ಗಲಭೆ ಸೃಷ್ಟಿಸಲು ಪ್ರಯತ್ನಿಸಲಾಗಿದೆ ಎಂದು ಆರೋಪಿಸಿ ಸಲ್ಲಿಸಲಾಗಿರುವ ಎಫ್‌ಐಆರ್‌ ಅನ್ನು ರದ್ದುಪಡಿಸಬೇಕೆಂದು ಕೋರಿ ಸ್ವಪ್ನ ಸುರೇಶ್ ಅವರು ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಸ್ವಪ್ನ ಸುರೇಶ್ ಅವರು ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ತಮ್ಮನ್ನು ಈ ಹಗರಣದಲ್ಲಿ ತಪ್ಪಾಗಿ ಸಿಲುಕಿಸಲಾಗಿದೆ ಎಂದು ಹೇಳಿದ್ದಾರೆ. ಮಾಜಿ ಸಚಿವ ಕೆ.ಟಿ.ಜಲೀಲ್‌ ಅವರ ಅಕ್ರಮ ಚಟುವಟಿಕೆಗಳ ಬಗ್ಗೆ ತಾವು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಕ್ಕಾಗಿ ತಮ್ಮ ವಿರುದ್ಧ ಗಲಭೆ ಸೃಷ್ಟಿಸಲು ಸಂಚು ರೂಪಿಸಲಾಗಿದೆ ಎಂಬ ದೂರು ನೀಡಲಾಗಿದೆ ಎಂದು ಅವರು ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.

ಯುಎಇ ರಾಜತಾಂತ್ರಿಕ ಕಚೇರಿಯಲ್ಲಿ ದೇಶ ವಿರೋಧಿ ಚಟುವಟಿಕೆ ನಡೆಸಿ ಅಕ್ರಮವಾಗಿ ಚಿನ್ನ ಸಾಗಣೆ ಮಾಡುವಲ್ಲಿಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಅವರ ಕುಟುಂಬದ ಇಬ್ಬರು ಸದಸ್ಯರು, ಮಾಜಿ ಸಚಿವ ಕೆ.ಟಿ.ಜಲೀಲ್, ಮಾಜಿ ಸ್ಪೀಕರ್ ಪಿ. ಶ್ರೀರಾಮಕೃಷ್ಣನ್, ಮುಖ್ಯಮಂತ್ರಿಯವರ ಮಾಜಿ ಪ್ರಧಾನ ಕಾರ್ಯದರ್ಶಿ ಎಂ. ಶಿವಶಂಕರ್ ಮತ್ತು ಕೆಲವು ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಸ್ವಪ್ನ ಸುರೇಶ್‌ ಆರೋಪಿಸಿದ್ದರು.

ADVERTISEMENT

ತಮ್ಮ ವಿರುದ್ಧ ದೂರು ದಾಖಲಿಸುವ ಮೂಲಕ ತಮ್ಮನ್ನು ಬೆದರಿಸಲು ಯತ್ನಿಸಲಾಗಿದೆ, ತಾವು ನ್ಯಾಯಾಲಯದ ಮುಂದೆ ಯಾವುದೇ ವಿಷಯ ತಿಳಿಸದಂತೆ ತಮ್ಮನ್ನು ಕಟ್ಟಿಹಾಕುವ ಪ್ರಯತ್ನವಾಗಿದೆ ಎಂದು ಅವರು ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.