ಜೈಪುರ: ಸಾಮಾಜಿಕ ಮಾಧ್ಯಮಗಳಲ್ಲಿ ವಿವಾದಾತ್ಮಕ ಪೋಸ್ಟ್‌ವೊಂದನ್ನು ಹಾಕಿಕೊಂಡಿದ್ದರು ಎಂಬ ಕಾರಣಕ್ಕೆ ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಎಂಬುವವರನ್ನು ಇಬ್ಬರು ದುಷ್ಕರ್ಮಿಗಳು ಮಂಗಳವಾರ ಕತ್ತು ಸೀಳಿ ಹತ್ಯೆ ಮಾಡಿದ್ದಾರೆ. ಈ ಘಟನೆಯಿಂದ ರಾಜಸ್ಥಾನದ ಜತೆಗೆ ದೇಶದ ವಿವಿಧೆಡೆ ಪ್ರತಿಭಟನೆ ಆರಂಭವಾಗಿದೆ.
ಘಟನೆ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಇವರಲ್ಲಿ ಒಬ್ಬನನ್ನುರಿಯಾಜ್ ಎಂದು ಗುರುತಿಸಲಾಗಿದೆ.
ಆರೋಪಿ ರಿಯಾಜ್, ಕನ್ನಯ್ಯಲಾಲ್ ಅವರ ಕತ್ತನ್ನು ಕತ್ತರಿಸಿದ್ದು, ಮತ್ತೊಬ್ಬ ಆರೋಪಿ ಈ ದೃಶ್ಯವನ್ನು ತನ್ನ ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದಾನೆ. ಈ ಕೊಲೆಯನ್ನು ತಾವೇ ಮಾಡಿದ್ದಾಗಿ ಹೇಳಿರುವ ವಿಡಿಯೊಯೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದಾರೆ.
ಈ ಭೀಕರ ಘಟನೆಯ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಉದಯಪುರದಲ್ಲಿ ಪ್ರತಿಭಟನೆ ಭುಗಿಲೆದ್ದಿತು. ನಗರದಲ್ಲಿ ಸದ್ಯ ಉದ್ವಿಗ್ನ ಪರಿಸ್ಥಿತಿ ನೆಲೆಸಿದೆ.
ಘಟನೆಯನ್ನು ಖಂಡಿಸಿರುವ ಮುಖ್ಯಮಂತ್ರಿಅಶೋಕ್ ಗೆಹಲೋತ್, ಶಾಂತಿ ಕಾಪಾಡಲು ಮನವಿ ಮಾಡಿದ್ದಾರೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
’ರಾಜಸಮಂದ್ ಜಿಲ್ಲೆ ಭೀಮ್ ಪ್ರದೇಶದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಮುಖದ ಗುರುತು ತಿಳಿಯದಂತೆ ಹೆಲ್ಮೆಟ್ ಧರಿಸಿ, ಬೈಕ್ ನಲ್ಲಿ ಪರಾರಿಯಾಗಲು ಯತ್ನಿಸಿದ್ದರು. ಉಳಿದ ಆರೋಪಿಗಳ ಪತ್ತೆಗೆ ಹತ್ತು ತಂಡಗಳನ್ನು ನಿಯೋಜಿಸಲಾಗಿದೆ‘ ಎಂದು ರಾಜಸಮಂದ್ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಚೌದರಿ ಹೇಳಿದ್ದಾರೆ.
’ರಾಜ್ಯದಲ್ಲಿ ಟೈಲರ್ ಹತ್ಯೆಗೆ ಕಾಂಗ್ರೆಸ್ ಸರ್ಕಾರದ ಓಲೈಕೆ ನೀತಿ ಅನುಸರಿಸುತ್ತಿರುವುದೇ ಕಾರಣ’ ಎಂದು ಆರೋಪಿಸಿರುವ ರಾಜಸ್ಥಾನ ಬಿಜೆಪಿ ಘಟಕದ ಮುಖ್ಯಸ್ಥ ಸತೀಶ್ ಪೂನಿಯಾ, ’ಪಿಎಫ್‌ಐ ಮತ್ತು ಇತರೆ ಉಗ್ರಗಾಮಿ ಸಂಘಟನೆಗಳಿಗೆ ರಾಜ್ಯ ಸರ್ಕಾರ ರಕ್ಷಣೆ ನೀಡುತ್ತಿದೆ. ಸೂಕ್ತ ತನಿಖೆ ನಡೆಸಿದರೆ ಉಗ್ರ ಸಂಘಟನೆ ಜತೆ ಸಂಪರ್ಕ ಹೊಂದಿರುವುದು ಗೊತ್ತಾಗುತ್ತದೆ’ ಎಂದು ಹೇಳಿದ್ದಾರೆ.
’ಜೂನ್ 17ರಂದು ಆರೋಪಿಗಳು ಕನ್ಹಯ್ಯ ಲಾಲ್‌ಗೆ ಬೆದರಿಕೆ ಹಾಕಿದ್ದರು. ಈತ ಪೊಲೀಸ್ ಭದ್ರತೆ ಒದಗಿಸುವಂತೆ ಮನವಿ ಮಾಡಿದ್ದರೂ ನೀಡಿರಲಿಲ್ಲ. ಇದು ಸರ್ಕಾರದ ನಿರ್ಲಕ್ಷ್ಯ ತೋರಿಸುತ್ತದೆ. ರಾಜ್ಯದ ಹಲವೆಡೆ ಹಿಂದೂಗಳ ಮೇಲೆ ದಾಳಿ ನಡೆಸಿ ಹತ್ಯೆ ಮಾಡಲಾಗುತ್ತಿದೆ‘ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಏಳು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕರ್ಫ್ಯೂ
ಟೈಲರ್ ಹತ್ಯೆ ಹಿನ್ನೆಲೆಯಲ್ಲಿ ಉದಯಪುರದ ಏಳು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ 8 ರಿಂದ ಮುಂದಿನ ಆದೇಶವರೆಗೆ ಕರ್ಫ್ಯೂ ಜಾರಿಗೊಳಿಸಲಾಗಿದೆ.ನಗರದಲ್ಲಿ ಮೊಬೈಲ್ ಇಂಟರ್‌ನೆಟ್ ಸ್ಥಗಿತಗೊಳಿಸಲಾಗಿದೆ.
’ಶಾಂತಿ ಕಾಪಾಡುವ ಉದ್ದೇಶದಿಂದ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಮತ್ತು ಪರೀಕ್ಷಾ ಸಿಬ್ಬಂದಿ ಹಾಗೂ ಅಗತ್ಯ ಸೇವೆಗಳಿಗೆ ವಿನಾಯಿತಿ ನೀಡಲಾಗಿದೆ‘ ಎಂದುಉದಯಪುರ ಕಲೆಕ್ಟರ್ ತಾರಚಂದ್ ಮೀನಾ ಆದೇಶದಲ್ಲಿ ತಿಳಿಸಿದ್ದಾರೆ.
’ರಾಜ್ಯಾದಾದ್ಯಂತ ಕಟ್ಟೆಚ್ಚರ ವಹಿಸುವಂತೆ ಐಜಿಪಿ ಮತ್ತು ಎಸ್‌ಪಿಗಳಿಗೆ ಸೂಚನೆ ನೀಡಲಾಗಿದ್ದು, ಮುನ್ನೆಚ್ಚರಿಕೆಯಾಗಿ ಗಸ್ತು ಪಡೆ ಹೆಚ್ಚಿಸಬೇಕು‘ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿ ಹವಾ ಸಿಂಗ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.