ADVERTISEMENT

ಎಸ್‌ಸಿ ಒಳಮೀಸಲಾತಿ ಜಾರಿಗೊಳಿಸಿದ ತೆಲಂಗಾಣ ಸರ್ಕಾರ

ಪಿಟಿಐ
Published 14 ಏಪ್ರಿಲ್ 2025, 14:34 IST
Last Updated 14 ಏಪ್ರಿಲ್ 2025, 14:34 IST
<div class="paragraphs"><p>ರೇವಂತ್‌ ರೆಡ್ಡಿ</p></div>

ರೇವಂತ್‌ ರೆಡ್ಡಿ

   

(ಪಿಟಿಐ ಚಿತ್ರ)

ಹೈದರಾಬಾದ್: ತೆಲಂಗಾಣದ ಎ.ರೇವಂತ್ ರೆಡ್ಡಿ ನೇತೃತ್ವದ ಕಾಂಗ್ರೆಸ್ ಸರ್ಕಾರವು ಪರಿಶಿಷ್ಟ ಜಾತಿ (ಎಸ್‌ಸಿ) ಒಳಮೀಸಲಾತಿ ಅನುಷ್ಠಾನಕ್ಕೆ ಸಂಬಂಧಿಸಿದ ಆದೇಶವನ್ನು ಸೋಮವಾರ ಹೊರಡಿಸಿದೆ.

ADVERTISEMENT

‘ತೆಲಂಗಾಣವು ಎಸ್‌ಸಿ ಒಳಮೀಸಲಾತಿ ಜಾರಿಗೊಳಿಸಿದ ಮೊದಲ ರಾಜ್ಯ ಎನಿಸಿಕೊಂಡಿದೆ’ ಎಂದು ನೀರಾವರಿ ಸಚಿವ ಎನ್‌.ಉತ್ತಮ್ ಕುಮಾರ್‌ ರೆಡ್ಡಿ ತಿಳಿಸಿದ್ದಾರೆ.

ಒಳಮೀಸಲಾತಿ ಜಾರಿ ಸಂಬಂಧ ತೆಲಂಗಾಣ ಸರ್ಕಾರವು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಮೀಮ್ ಅಖ್ತರ್ ಅವರ ನೇತೃತ್ವದಲ್ಲಿ ಆಯೋಗವನ್ನು ರಚಿಸಿತ್ತು. ತೆಲಂಗಾಣದಲ್ಲಿ ಎಸ್‌ಸಿ ಪಟ್ಟಿಯಲ್ಲಿ 59 ಉಪಜಾತಿಗಳಿದ್ದು, ಜನಸಂಖ್ಯೆ, ಹಿಂದುಳಿದಿರುವಿಕೆ ಆಧಾರದಲ್ಲಿ ಅವನ್ನು ಮೂರು ಗುಂಪುಗಳನ್ನಾಗಿ ಮಾಡಿ ಮೀಸಲಾತಿ ಹಂಚಿಕೆ ಮಾಡಬೇಕು ಎಂದು ಸಮಿತಿ ಶಿಫಾರಸು ಮಾಡಿತ್ತು.

‘ತೆಲಂಗಾಣ ಪರಿಶಿಷ್ಟ ಜಾತಿಗಳ (ಮೀಸಲಾತಿ ತರ್ಕಬದ್ಧಗೊಳಿಸುವಿಕೆ) ಕಾಯ್ದೆಗೆ– 2025’ ರಾಜ್ಯಪಾಲರು ಏಪ್ರಿಲ್ 8 ರಂದು ಅಂಕಿತ ಹಾಕಿದ್ದಾರೆ. ಏ.14 ರಂದು ಗೆಜೆಟ್‌ ಅಧಿಸೂಚನೆ ಹೊರಡಿಸಲಾಗಿದೆ’ ಎಂದು ಸರ್ಕಾರದ ಆದೇಶ ತಿಳಿಸಿದೆ.

ಎಸ್‌ಸಿ ಒಳಮೀಸಲಾತಿ ಸಂಪುಟ ಉಪಸಮಿತಿಯ ನೇತೃತ್ವ ವಹಿಸಿದ್ದ ಸಚಿವ ರೆಡ್ಡಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಸರ್ಕಾರಿ ಆದೇಶದ ಮೊದಲ ಪ್ರತಿಯನ್ನು ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಅವರಿಗೆ ನೀಡಲಾಗಿದೆ’ ಎಂದರು. 

‘ಏ.14ರಿಂದ ತೆಲಂಗಾಣದಲ್ಲಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಎಸ್‌ಸಿ ಒಳಮೀಸಲಾತಿಯನ್ನು ಅನುಷ್ಠಾನಕ್ಕೆ ತರಲಾಗಿದೆ. ಅದಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶವನ್ನು ಹೊರಡಿಸಲಾಗಿದೆ’ ಎಂದು ಹೇಳಿದರು.

‘ತೆಲಂಗಾಣ ಪರಿಶಿಷ್ಟ ಜಾತಿಗಳ (ಮೀಸಲಾತಿ ತರ್ಕಬದ್ಧಗೊಳಿಸುವಿಕೆ) ಮಸೂದೆ– 2025’ಅನ್ನು ತೆಲಂಗಾಣ ವಿಧಾನಸಭೆಯಲ್ಲಿ ಕಳೆದ ತಿಂಗಳು ಅಂಗೀಕರಿಸಲಾಗಿತ್ತು. ಸುಪ್ರೀಂ ಕೋರ್ಟ್‌ ಕಳೆದ ವರ್ಷ ಎಸ್‌ಸಿ ಒಳಮೀಸಲಾತಿ ಪರವಾಗಿ ತೀರ್ಪು ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.