ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಲವಾಗಿ ಖಂಡಿಸಿದ್ದಾರೆ.
‘ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಿಂದ ದುಃಖಿತನಾಗಿದ್ದೇನೆ. ಮೃತರ ಕುಟುಂಬಕ್ಕೆ ನನ್ನ ಸಂತಾಪಗಳು. ಈ ಹೇಯ ಕೃತ್ಯದಲ್ಲಿ ಭಾಗಿಯಾಗಿರುವವರನ್ನು ಸುಮ್ಮನೆ ಬಿಡುವುದಿಲ್ಲ’ ಎಂದು ಹೇಳಿದ್ದಾರೆ.
‘ಘಟನೆಯ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಹಿತಿ ನೀಡಿದ್ದೇನೆ. ಸಂಬಂಧಿತ ಅಧಿಕಾರಿಗಳೊಂದಿಗೆ ವರ್ಚುವಲ್ ಆಗಿ ಸಭೆ ನಡೆಸಲಾಗಿದೆ. ತುರ್ತು ಭದ್ರತಾ ಪರಿಶೀಲನಾ ಸಭೆ ನಡೆಸಲು ಶೀಘ್ರದಲ್ಲೇ ಶ್ರೀನಗರಕ್ಕೆ ತೆರಳುತ್ತಿದ್ದೇನೆ’ ಎಂದು ‘ಎಕ್ಸ್’ನಲ್ಲಿ ತಿಳಿಸಿದ್ದಾರೆ.
ಇನ್ನೂ, ಘಟನೆಯನ್ನು ಖಂಡಿಸಿರುವ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ‘ಅಮಾಯಕ ಪ್ರವಾಸಿಗರ ಮೇಲೆ ಹೇಡಿತನದ ದಾಳಿಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ಇಂತಹ ಉದ್ದೇಶಿತ ದಾಳಿಗಳು ಮಾನವೀಯತೆಗೆ ಅಪಾಯಕಾರಿಯಾಗಿದೆ. ಮೃತರ ಕುಟುಂಬಕ್ಕೆ ನನ್ನ ಸಂತಾಪಗಳು’ ಎಂದು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸೇರಿದಂತೆ ಹಲವು ರಾಜಕೀಯ ಮುಖಂಡರು ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
ಭಯೋತ್ಪಾದಕ ದಾಳಿಯಲ್ಲಿ ಓರ್ವ ಪ್ರವಾಸಿಗ ಮೃತಟ್ಟಿದ್ದು, ಸುಮಾರು 20 ಮಂದಿ ಗಾಯಗೊಂಡಿದ್ದಾರೆ. ಮೃತ ವ್ಯಕ್ತಿಯನ್ನು ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ ಎಂದು ಗುರುತಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.