ಮುಂಬೈ: ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲ ಸೂಚಕವಾಗಿ ಗಣರಾಜ್ಯೋತ್ಸವದ ಮುನ್ನಾ ದಿನವಾದ ಜನವರಿ 25 ಸೋಮವಾರದಂದು ಮಹಾರಾಷ್ಟ್ರದ ಮುಂಬೈನಲ್ಲಿ ಬೃಹತ್ ರ‍್ಯಾಲಿಯನ್ನು ಆಯೋಜಿಸಲಾಗಿದೆ. ಇದರಂಗವಾಗಿ ಸಾವಿರಾರು ಸಂಖ್ಯೆಯ ರೈತರು ಭಾನುವಾರ ಸಂಜೆಯೇ ಮುಂಬೈ ನಗರದಲ್ಲಿ ಬೀಡು ಬಿಟ್ಟಿದ್ದಾರೆ.
ರೈತರ ಪ್ರತಿಭಟನೆ ನಡೆಯಲಿರುವ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ದಕ್ಷಿಣ ಮುಂಬೈಯ ರ‍್ಯಾಲಿ ನಡೆಯುವ ಆಜಾದ್ ಮೈದಾನದಲ್ಲಿ ರಾಜ್ಯ ಮೀಸಲು ಪೊಲೀಸ್ ಪಡೆಯ (ಎಸ್‌ಆರ್‌ಪಿಎಫ್) ಸಿಬ್ಬಂದಿ ನಿಯೋಜಿಸಲಾಗಿದೆ. ರ‍್ಯಾಲಿಯ ಮೇಲೆ ಸೂಕ್ಷ್ಮ ನಿಗಾ ವಹಿಸಲು ಡ್ರೋನ್ ಬಳಸಲಾಗುವುದು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) ಮಹಾರಾಷ್ಟ್ರ ಘಟಕದ ಪ್ರಕಾರ, ಶನಿವಾರದಂದು ನಾಸಿಕ್‌ನಿಂದ ಸುಮಾರು 15,000ದಷ್ಟು ರೈತರು ವಿವಿಧ ವಾಹನಗಳ ಮೂಲಕ ಮುಂಬೈಗೆ ತೆರಳಿದ್ದಾರೆ ಎಂದು ತಿಳಿಸಿದ್ದಾರೆ.
ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಮತ್ತು ಆಡಳಿತರೂಢ ಮಹಾ ವಿಕಾಸ್ ಅಘಾಡಿ (ಎಂವಿಎ) ಪ್ರಮುಖ ನಾಯಕರು, ಸೋಮವಾರ ರೈತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಶರದ್ ಪವಾರ್ ಅವರಲ್ಲದೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಹಾಗೂ ಕಂದಾಯ ಸಚಿವ ಬಾಲಾಸಾಹೇಬ್ ಥೋರಟ್ ಮತ್ತು ಶಿವಸೇನಾ ಪಕ್ಷದ ಮುಖಂಡ ಹಾಗೂ ರಾಜ್ಯ ಪ್ರವಾಸೋದ್ಯಮ ಸಚಿವ ಆದಿತ್ಯ ಠಾಕ್ರೆ ಕೂಡಾ ಭಾಗವಹಿಸಲಿದ್ದಾರೆ.
ಮುಂಬೈಗೆ ತೆರಳುವ ಮುನ್ನ ಭಾನುವಾರ ಬೆಳಗ್ಗೆ ಕಸರ ಘಾಟಿಯಲ್ಲಿ ರೈತರು ಬೃಹತ್ ಮೆರವಣಿಗೆ ನಡೆಸಿದರು. ಬೆಳಗ್ಗೆ 9 ಗಂಟೆಗೆ ಪ್ರಾರಂಭವಾದ ಏಳು ಕೀ.ಮೀ. ಉದ್ದದ ಮೆರವಣಿಗೆಯಲ್ಲಿ ಮಹಿಳಾ ರೈತರು ಭಾಗಿಯಾದರು. ಬಳಿಕ ಸುಮಾರು 11.30ರ ವೇಳೆಗೆ ರ‍್ಯಾಲಿ ಕೊನೆಗೊಂಡ ಬಳಿಕ ರೈತರು ವಿವಿಧ ವಾಹನಗಳಲ್ಲಿ ಮುಂಬೈನತ್ತ ಪ್ರಯಾಣ ಬೆಳೆಸಿದರು.
ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರಾಷ್ಟ್ರ ರಾಜಧಾನಿ ನವದಹೆಲಿ ಗಡಿ ಪ್ರದೇಶಗಳಲ್ಲಿ ಕಳೆದ ಎರಡು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲ ಸೂಚಿಸುವ ಸಲುವಾಗಿ ಬೃಹತ್ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ. ಮಹಾರಾಷ್ಟ್ರದಲ್ಲಿ 100ರಷ್ಟು ಸಂಘಟನೆಗಳು ಒಗ್ಗೂಡಿ ಪ್ರತಿಭಟನೆಗೆ ಬೆಂಬಲ ಸೂಚಿಸಿವೆ. ಬಳಿಕ ಪ್ರತಿಭಟನಾಕಾರರು ರಾಜಭವನಕ್ಕೆ ತೆರಳಿ ರಾಜ್ಯಪಾಲ ಬಿಎಸ್ ಕೋಶ್ಯಾರಿ ಅವರಿಗೆ ಮನವಿಯನ್ನು ಸಲ್ಲಿಸಲಿದ್ದಾರೆ.
ಜನವರಿ 26 ಗಣರಾಜ್ಯೋತ್ಸವದಂದು ಆಜಾದ್ ಮೈದಾನದಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲು ಪ್ರತಿಭಟನಾಕಾರರು ನಿರ್ಧರಿಸಿದ್ದು, ರೈತರ ಹೋರಾಟವನ್ನು ಯಶಸ್ವಿಗೊಳಿಸಲು ಪ್ರತಿಜ್ಞೆಯನ್ನು ಸ್ವೀಕರಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.