ಪ್ರಾತಿನಿಧಿಕ ಚಿತ್ರ
ಕೋಲ್ಕತ್ತ (ಪಶ್ಚಿಮ ಬಂಗಾಳ): ಇಲ್ಲಿನ ಕಾನೂನು ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರನ್ನು ಶುಕ್ರವಾರ ಬಂಧಿಸಲಾಗಿದೆ.
ಜೂನ್ 25 ರಂದು ಕೋಲ್ಕತ್ತದ ಕಸ್ಬಾದಲ್ಲಿ ಈ ಘಟನೆ ನಡೆದಿದೆ ಎಂದು 'ದಿ ಟೆಲಿಗ್ರಾಫ್' ವರದಿ ಮಾಡಿದೆ.
ಬಂಧಿತ ಮೂವರಲ್ಲಿ ಇಬ್ಬರು ಅದೇ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಒಬ್ಬ ಹಳೆಯ ವಿದ್ಯಾರ್ಥಿ ಎನ್ನಲಾಗಿದೆ.
ಹಳೆಯ ವಿದ್ಯಾರ್ಥಿಯೇ ಪ್ರಮುಖ ಆರೋಪಿ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದೂ ಅವರು ಹೇಳಿದ್ದಾರೆ.
ಕ್ಷಿಪ್ರ ತನಿಖೆ ನಡೆಯಲಿ: ಮಹಿಳಾ ಆಯೋಗ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತ್ತ ಪೊಲೀಸ್ ಕಮಿಷನರ್ ಅವರಿಗೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ವಿಜಯಾ ರಹಟ್ಕರ್ ಪತ್ರ ಬರೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ತ್ವರಿತವಾಗಿ ಮತ್ತು ಕಾಲಮಿತಿಯಲ್ಲಿ ತನಿಖೆ ನಡೆಸುವಂತೆ ನಿರ್ದೇಶನ ನೀಡಿದ್ದಾರೆ. ಸಂತ್ರಸ್ತೆಗೆ ವೈದ್ಯಕೀಯ ಮಾನಸಿಕ ಹಾಗೂ ಕಾನೂನಾತ್ಮಕ ನೆರವು ನೀಡುವಂತೆಯೂ ತಿಳಿಸಿದ್ದಾರೆ.
ವಿದ್ಯಾರ್ಥಿನಿಯರಿಗೆ ಸುರಕ್ಷತೆ ಇಲ್ಲ: ಬಿಜೆಪಿ ಕಿಡಿ ರಾಜ್ಯದ ಕಾನೂನು ಸುವ್ಯವಸ್ಥೆಯು ಅಧೋಗತಿಗೆ ತಲುಪಿದ್ದು ರಾಜ್ಯದಲ್ಲಿನ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿನಿಯರಿಗೆ ಸುರಕ್ಷತೆ ಇಲ್ಲದಂತಾಗಿದೆ ಎಂದು ಬಿಜೆಪಿಯ ಪಶ್ಚಿಮ ಬಂಗಾಳ ರಾಜ್ಯ ಘಟಕದ ಅಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಸುಕಾಂತ ಮಜೂಂದಾರ್ ದೂರಿದ್ದಾರೆ. ಕಾನೂನು ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರವನ್ನು ಖಂಡಿಸಿ ಮಾತನಾಡಿ ‘ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ ವೈದ್ಯೆಯ ಮೇಲಿನ ಅತ್ಯಾಚಾರ ಹತ್ಯೆ ಬೆನ್ನಲ್ಲೇ ಈಗ ಕಾನೂನು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆದಿದೆ. ಗೃಹ ಇಲಾಖೆ ಖುದ್ದು ಮುಖ್ಯಮಂತ್ರಿಗಳ ಕೈಯಲ್ಲೇ ಇದ್ದರೂ ವಿದ್ಯಾರ್ಥಿನಿಯರಿಗೆ ಸುರಕ್ಷತೆ ಇಲ್ಲದಂತಾಗಿದೆ’ ಎಂದಿದ್ದಾರೆ. ಪ್ರತಿಪಕ್ಷ ನಾಯಕ ಸುವೇಂಧು ಅಧಿಕಾರಿ ಕೂಡ ಘಟನೆಯನ್ನು ಖಂಡಿಸಿ ‘ಮಮತಾ ಬ್ಯಾನರ್ಜಿ ಅವರಿಗೆ ಮುಖ್ಯಮಂತ್ರಿ ಸ್ಥಾನದಲ್ಲಿರಲು ಯಾವ ಹಕ್ಕೂ ಇಲ್ಲ. ಅವರು ರಾಜಿನಾಮೆ ನೀಡಬೇಕು’ ಎಂದು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.