ಸಾಂದರ್ಭಿಕ ಚಿತ್ರ
ನವದೆಹಲಿ: ಇಲ್ಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ ಸುಮಾರು ₹40 ಕೋಟಿ ಮೌಲ್ಯದ ಕೊಕೇನ್ ಅನ್ನು ವಶಪಡಿಸಿಕೊಳ್ಳಲಾಗಿದ್ದು, ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಇಲಾಖೆ ಭಾನುವಾರ ತಿಳಿಸಿದೆ.
ಬ್ರೆಜಿಲ್ ಮೂಲದ ಇಬ್ಬರು ಮಹಿಳೆಯರು ಮತ್ತು ಕೀನ್ಯಾದ ವ್ಯಕ್ತಿಯನ್ನು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಲಾಗಿದೆ ಎಂದು ಇಲಾಖೆ ಹೇಳಿದೆ.
ಜನವರಿ 28ರಂದು ಪ್ಯಾರಿಸ್ ಮೂಲಕ ಸಾವೊ ಪಾಲೊದಿಂದ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ 26 ವರ್ಷದ ಬ್ರೆಜಿಲಿಯನ್ ಮಹಿಳೆಯನ್ನು ತಡೆದು ತಪಾಸಣೆ ನಡೆಸಲಾಯಿತು. ಈ ವೇಳೆ ಮಹಿಳೆಯಿಂದ 866 ಗ್ರಾಂ ಕೊಕೇನ್ ಹೊಂದಿದ್ದ 98 ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ ₹12.99 ಕೋಟಿ ಎಂದು ಅಂದಾಜಿಸಲಾಗಿದ್ದು, ಮಹಿಳೆಯನ್ನು ಬಂಧಿಸಲಾಗಿದೆ ಎಂದು ಇಲಾಖೆ ಹೇಳಿದೆ.
ಜನವರಿ 24ರಂದು ಬ್ರೆಜಿಲ್‌ನಿಂದ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮತ್ತೊಬ್ಬ ಮಹಿಳಾ ಪ್ರಯಾಣಿಕರನ್ನು ತಪಾಸಣೆ ನಡೆಸಲಾಯಿತು. ಈ ವೇಳೆ ಕೊಕೇನ್ ಎಂದು ಶಂಕಿಸಲಾದ ಬಿಳಿ ಪುಡಿ ಹೊಂದಿದ್ದ 100 ಮಾತ್ರೆಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಪರೀಕ್ಷೆಯ ಬಳಿಕ ಕೊಕೇನ್ ಎಂದು ದೃಢಪಟ್ಟಿದ್ದು, ₹12.03 ಕೋಟಿ ಮೌಲ್ಯದ 802 ಗ್ರಾಂ ಕೊಕೇನ್ ವಶಪಡಿಸಿಕೊಳ್ಳಲಾಗಿದೆ.
ಅದೇ ದಿನ (ಜ.24) ಅಡಿಸ್ ಅಬಾಬಾದಿಂದ ಬಂದ ಕೀನ್ಯಾ ಮೂಲದ ವ್ಯಕ್ತಿಯನ್ನು ತಪಾಸಣೆ ನಡೆಸಲಾಯಿತು. ಈ ವೇಳೆ ಆತನಿಂದ 996 ಗ್ರಾಂ ಕೊಕೇನ್ ತುಂಬಿದ್ದ 67 ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಯಿತು. ಇದರ ಮೌಲ್ಯ 14.94 ಕೋಟಿಯಾಗಿದೆ ಎಂದು ಕಸ್ಟಮ್ಸ್ ಇಲಾಖೆ ಹೇಳಿದೆ.
ಒಟ್ಟಾರೆ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳ ತ್ವರಿತ ಕ್ರಮದಿಂದಾಗಿ ಸುಮಾರು ₹39.96 ಕೋಟಿ ಮೌಲ್ಯದ 2.26 ಕೆ.ಜಿ ಕೊಕೇನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಮಾದಕ ವಸ್ತು ಕಳ್ಳಸಾಗಣೆ ಜಾಲದ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಇಲಾಖೆ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.