ADVERTISEMENT

ಜಮ್ಮು ಮತ್ತು ಕಾಶ್ಮೀರದ ಜನರನ್ನು ಕಡೆಗಣಿಸುವ ಕಾಲ ಮುಗಿದಿದೆ: ಅಮಿತ್‌ ಶಾ

ಪಿಟಿಐ
Published 24 ಅಕ್ಟೋಬರ್ 2021, 11:37 IST
Last Updated 24 ಅಕ್ಟೋಬರ್ 2021, 11:37 IST
ಕೇಂದ್ರ ಗೃಹ ಸಚಿವ ಅಮಿತ್‌ ಶಾ
ಕೇಂದ್ರ ಗೃಹ ಸಚಿವ ಅಮಿತ್‌ ಶಾ    

ಜಮ್ಮು: ಜಮ್ಮುವಿನಲ್ಲಿ ಜನರನ್ನು ಕಡೆಗಣಿಸುವ ಕಾಲ ಮುಗಿದಿದೆ. ಇದೀಗ ಜಮ್ಮು ಮತ್ತು ಕಾಶ್ಮೀರ ಒಟ್ಟಾಗಿ ಅಭಿವೃದ್ಧಿ ಸಾಧಿಸಲಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರವು ಹಿಂಪಡೆದ ಬಳಿಕ ಮತ್ತು ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶವಾಗಿ ವಿಭಜಿಸಿದ ನಂತರ ಇದೇ ಮೊದಲ ಬಾರಿಗೆ ಅವರುಇಲ್ಲಿಗೆ ಭೇಟಿ ನೀಡಿದ್ದಾರೆ.

ಭಗವತಿ ನಗರ್‌ನಲ್ಲಿ ಆಯೋಜಿಸಿದ್ದ ಸಾರ್ವಜನಿಕ ರ‍್ಯಾಲಿಯಲ್ಲಿ ಮಾತನಾಡಿದ ಅವರು‌, ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಗೆ ಯಾರೊಬ್ಬರೂ ತಡೆಯೊಡ್ಡಲಾರರು. ಕೇಂದ್ರಾಡಳಿತ ಪ್ರದೇಶದಲ್ಲಿ ಈಗಾಗಲೇ ₹ 12,000 ಕೋಟಿ ಹೂಡಿಕೆ ಮಾಡಲಾಗಿದೆ. 2022ರ ಅಂತ್ಯದ ವೇಳೆಗೆ ₹ 51,000 ಕೋಟಿ ನೀಡುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದು ಹೇಳಿದ್ದಾರೆ.

ADVERTISEMENT

ಕಣಿವೆಯಲ್ಲಿ ಗಲಭೆ ಮತ್ತು ಉಗ್ರರ ದಾಳಿಯಿಂದ ಯಾರೊಬ್ಬರ ಜೀವಕ್ಕೂ ಅಪಾಯವಾಗದಂತೆ ನೋಡಿಕೊಳ್ಳುವುದು ಸರ್ಕಾರದ ಉದ್ದೇಶ ಎಂದಿರುವ ಶಾ, ಯುವಕರು ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಗೆ ಕೈ ಜೋಡಿಸಿದರೆ, ಉಗ್ರರ ದುಷ್ಟ ಸಂಚುಗಳು ವಿಫಲವಾಗಲಿವೆ ಎಂದು ಕಿವಿಮಾತು ಹೇಳಿದ್ದಾರೆ.

ಶಾ ಅವರು ಮೂರು ದಿನಗಳ ಭೇಟಿ ಸಲುವಾಗಿ ಶನಿವಾರ ಇಲ್ಲಿಗೆ ಆಗಮಿಸಿದ್ದಾರೆ. ಈ ಹಿನ್ನಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ.

ವಲಸೆ ಕಾರ್ಮಿಕರನ್ನು ಗುರಿಯಾಗಿರಿಸಿ ಉಗ್ರರು ಸರಣಿ ದಾಳಿ ನಡೆಸುತ್ತಿರುವ ಹೊತ್ತಿನಲ್ಲಿ ಗೃಹ ಸಚಿವರು ಭೇಟಿ ನೀಡಿರುವುದು ಮಹತ್ವ ಪಡೆದುಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.