ಹೈದರಾಬಾದ್: ತಿರುಪತಿಯಲ್ಲಿ ಜನವರಿ 8ರಂದು ಸಂಭವಿಸಿದ್ದ ಕಾಲ್ತುಳಿತ ಪ್ರಕರಣದಲ್ಲಿ 6 ಮಂದಿ ಮೃತಪಟ್ಟು, 30ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು. ಪ್ರಕರಣದ ತನಿಖೆಗಾಗಿ ತನಿಖಾ ಆಯೋಗವನ್ನು ರಚಿಸುವುದಾಗಿ ಆಂಧ್ರ ಪ್ರದೇಶ ಸರ್ಕಾರ ಬುಧವಾರ ಪ್ರಕಟಿಸಿದೆ.
ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಂ.ಸತ್ಯನಾರಾಯಣ ಮೂರ್ತಿ ತನಿಖೆಯ ನೇತೃತ್ವ ವಹಿಸಲಿದ್ದಾರೆ.
ತಿರುಮಲ ದೇವಸ್ಥಾನದಲ್ಲಿ ವೈಕುಂಠ ದ್ವಾರ ದರ್ಶನಕ್ಕಾಗಿ ಟಿಕೆಟ್ ಪಡೆಯಲು ನಿಂತಿದ್ದಾಗ ಕಾಲ್ತುಳಿತ ಸಂಭವಿಸಿತ್ತು. ಈ ಪ್ರಕರಣ ಸಂಬಂಧ ಆರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಆಯೋಗಕ್ಕೆ ತಿಳಿಸಲಾಗಿದೆ.
ಟೋಕನ್ ವಿತರಣೆಗೆ ಸರಿಯಾದ ವ್ಯವಸ್ಥೆ ಮಾಡಲಾಗಿದೆಯೇ?, ಆ ವ್ಯವಸ್ಥೆಗಳಲ್ಲಿ ಯಾವುದೇ ನ್ಯೂನತೆಗಳಿವೆಯೇ ಎಂದು ಗುರುತಿಸಿ. ನ್ಯೂನತೆಗಳು ಕಂಡುಬಂದರೆ, ಸಂಬಂಧಿತ ವ್ಯಕ್ತಿಗಳನ್ನು ಹೊಣೆಯಾಗಿಸಿ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಕ್ರಮಗಳನ್ನು ಸೂಚಿಸಿ. ವೆಂಕಟೇಶ್ವರನ ದರ್ಶನಕ್ಕಾಗಿ ತಿರುಪತಿಗೆ ಭೇಟಿ ನೀಡುವ ಭಕ್ತರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಸಾಂಸ್ಥಿಕ ಕಾರ್ಯವಿಧಾನಗಳ ಕುರಿತು ಸೂಕ್ತ ಶಿಫಾರಸು ಮಾಡುವಂತೆಯೂ ತನಿಖಾ ತಂಡಕ್ಕೆ ಸೂಚಿಸಲಾಗಿದೆ.
ಘಟನೆ ನಡೆದ ಮರುದಿನ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಗಾಯಾಳುಗಳನ್ನು ಭೇಟಿಯಾಗಿದ್ದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಅವರು, ಕಾಲ್ತುಳಿತ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ ಎಂದೂ ತಿಳಿಸಿದ್ದರು.
ಘಟನೆ ಸಂಬಂಧ ನಿರ್ಲಕ್ಷ್ಯದ ಆರೋಪದ ಮೇರೆಗೆ ಡಿಎಸ್‌ಪಿ ಸೇರಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿತ್ತು. ಅಲ್ಲದೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್.ಪಿ) ಸೇರಿದಂತೆ ಮೂವರು ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಬೇಸರ ವ್ಯಕ್ತಪಡಿಸಿದ್ದ ಸಿಎಂ ನಾಯ್ಡು, ಮೃತಪಟ್ಟ ಆರು ಜನರ ಕುಟುಂಬಕ್ಕೆ ತಲಾ ₹25 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ ₹ 2 ಲಕ್ಷ ಪರಿಹಾರವನ್ನು ಘೋಷಿಸಿದ್ದರು.
ತಿರುಪತಿಯ ಎಂಜಿಎಂ ಶಾಲೆ ಬಳಿಯ ಬೈರಾಗಿ ಪಟ್ಟೇಡ ಬಳಿ ಜ.8ರಂದು ನೂರಾರು ಜನರು ವೈಕುಂಠ ದ್ವಾರ ದರ್ಶನಕ್ಕಾಗಿ ಟಿಕೆಟ್ ಪಡೆಯಲು ನಿಂತಿದ್ದಾಗ ನೂಕು ನುಗ್ಗಲು ಉಂಟಾಗಿತ್ತು. ಈ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 6 ಮಂದಿ ಮೃತಪಟ್ಟು, 30ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.