ADVERTISEMENT

ವಿಧಾನಸಭೆ ಚುನಾವಣೆ ಹಿನ್ನೆಲೆ: ಸಂಸತ್‌ ಅಧಿವೇಶನ ಮುಂದೂಡಲು ಟಿಎಂಸಿ ಮನವಿ

ಪಿಟಿಐ
Published 8 ಮಾರ್ಚ್ 2021, 5:54 IST
Last Updated 8 ಮಾರ್ಚ್ 2021, 5:54 IST
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ   

ನವದೆಹಲಿ: ದೇಶದ ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರದಿಂದ ಆರಂಭವಾಗಿರುವ ಸಂಸತ್ತಿನ ಅಧಿವೇಶನವನ್ನು ಮುಂದೂಡಲು ತೃಣಮೂಲ ಕಾಂಗ್ರೆಸ್ ಮನವಿ ಮಾಡಿದೆ.

ಟಿಎಂಸಿ ರಾಷ್ಟ್ರೀಯ ವಕ್ತಾರ ಮತ್ತು ರಾಜ್ಯಸಭಾ ಸದಸ್ಯ ಡೆರೆಕ್ ಒಬ್ರಿಯಾನ್‌ ರಾಜ್ಯಸಭಾ ಅಧ್ಯಕ್ಷರಿಗೆ ಬರೆದ ಪತ್ರದಲ್ಲಿ, ‘ಪಶ್ಚಿಮ ಬಂಗಾಳ ಸೇರಿದಂತೆ ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ(ಮಾ.8) ಆರಂಭವಾಗಿರುವ ಸಂಸತ್ತಿನ ಅಧಿವೇಶನವನ್ನು ಮುಂದೂಡಬೇಕೆಂದು ತಮ್ಮಲ್ಲಿ ವಿನಂತಿಸುತ್ತೇವೆ‘ ಎಂದು ಮನವಿ ಮಾಡಿದ್ದಾರೆ.

‘ಚುನಾವಣಾ ಆಯೋಗವು ಫೆಬ್ರುವರಿ26ರಂದು ಪಶ್ಚಿಮ ಬಂಗಾಳ ಸೇರಿದಂತೆ ಐದು ರಾಜ್ಯಗಳಿಗೆ ವಿಧಾನಸಭಾ ಚುನಾವಣೆಯನ್ನು ಘೋಷಿಸಿದೆ. ರಾಜ್ಯದಲ್ಲಿ ಚುನಾವಣಾ ಚುನಾವಣೆ ಸಿದ್ಧತೆಗಳು ನಡೆಯುತ್ತಿದ್ದು, ಟಿಎಂಸಿ ಪಕ್ಷದ ಸಂಸದರು ಅಧಿವೇಶನಕ್ಕೆ ಹಾಜರಾಗಲು ಕಷ್ಟವಾಗುತ್ತದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗಿರುವ ಬಜೆಟ್ ಅಧಿವೇಶನದ ಎರಡನೇ ಭಾಗವನ್ನು ದಯವಿಟ್ಟು ಮುಂದೂಡಬೇಕು‘ ಎಂದು ಅವರು ಮನವಿ ಮಾಡಿದ್ದಾರೆ.

ADVERTISEMENT

ಟಿಎಂಸಿ ಸಂಸದ ಸುದೀಪ್ ಬಂಡೋಪಾಧ್ಯಾಯ ಕೂಡ ಈ ವಿಷಯದಲ್ಲಿ ಲೋಕಸಭಾಅಧ್ಯಕ್ಷರಿಗೆ ಪತ್ರ ಬರೆದು ಮನವಿ ಮಾಡಿದ್ದರು.

‌ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಭಾಗ ಸೋಮವಾರದಿಂದ ಆರಂಭವಾಗಿದೆ. ಬಹಳಷ್ಟು ಸಂಸದರು ಮಾರ್ಚ್-ಏಪ್ರಿಲ್‌ನಲ್ಲಿ ಐದು ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ ತೆರಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಅಧಿವೇಶನದ ಅವಧಿಯನ್ನು ಮೊಟಕುಗೊಳಿಸುವ ಸಾಧ್ಯತೆಯಿದೆ. ಈಗಿರುವ ಯೋಜನೆಯಂತೆ ಅಧಿವೇಶನ ಏಪ್ರಿಲ್ 8 ರಂದು ಮುಕ್ತಾಯಗೊಳ್ಳಬೇಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.