ಕರೂರು ಜಿಲ್ಲೆಯಲ್ಲಿ ನಡೆದ ರ‍್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿದ ನಂತರ ಬಿದ್ದಿರುವ ಚಪ್ಪಲಿಗಳ ರಾಶಿ
–ಎಎಫ್‌ಪಿ ಚಿತ್ರ
ಚೆನ್ನೈ: ಚಿತ್ರನಟ, ಟಿವಿಕೆ ಪಕ್ಷದ ಅಧ್ಯಕ್ಷ ವಿಜಯ್ ಅವರ ರ‍್ಯಾಲಿಯ ವೇಳೆ ನಡೆದ ಕಾಲ್ತುಳಿತ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಗೆ ಮದ್ರಾಸ್ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ.
ಕಾಲ್ತುಳಿತ ಘಟನೆಗೆ ಸಂಬಂಧಿಸಿ ಸರ್ಕಾರದ ನಿರ್ಲಕ್ಷ್ಯ ಸೇರಿದಂತೆ ಹಲವು ಅನುಮಾನಗಳು ಇವೆ ಎಂದು ಬಿಜೆಪಿ ನಾಯಕಿ ಉಮಾ ಆನಂದ್ ಅವರು ನ್ಯಾಯಾಲಯದ ಮೊರೆ ಹೋಗಿದ್ದರು.
ಅರ್ಜಿಯ ವಿಚಾರಣೆಗೆ ನಿರಾಕರಿಸಿದ ವಿಭಾಗೀಯ ಪೀಠವು, ಹೈಕೋರ್ಟ್‌ನ ಮದುರೈ ಪೀಠಕ್ಕೆ ಅರ್ಜಿ ಸಲ್ಲಿಸುವಂತೆ ಸೂಚಿಸಿದೆ.
ವಿಜಯ್ ಸೆಪ್ಟೆಂಬರ್ 27ರಂದು ಕರೂರಿನಲ್ಲಿ ರ‍್ಯಾಲಿ ನಡೆಸುತ್ತಿದ್ದ ವೇಳೆ ಕಾಲ್ತುಳಿತ ಸಂಭವಿಸಿ 41 ಮಂದಿ ಮೃತಪಟ್ಟಿದ್ದರು.
‘ಎಸ್‌ಐಟಿ ರಚಿಸಿ’: ಕಾಲ್ತುಳಿತ ಪ್ರಕರಣದ ತನಿಖೆ ನಡೆಸಲು ವಿಶೇಷ ತನಿಖಾ ತಂಡ( ಎಸ್‌ಐಟಿ) ರಚನೆ ಮಾಡುವಂತೆ ಮದ್ರಾಸ್ ಹೈಕೋರ್ಟ್ ಶುಕ್ರವಾರ ನಿರ್ದೇಶನ ನೀಡಿ ಆದೇಶ ಹೊರಡಿಸಿದೆ.
ಹಿರಿಯ ಐಪಿಎಸ್ ಅಧಿಕಾರಿ, ಉತ್ತರ ವಲಯದ ಐಜಿಪಿ ಅಸ್ರಾ ಗರ್ಗ್ ಅವರ ನೇತೃತ್ವದಲ್ಲಿ ತಂಡ ರಚಿಸಲು ಸೂಚಿಸಿದ್ದು, ಸೆಪ್ಟೆಂಬರ್ 27ರಂದು ಕರೂರಿನಲ್ಲಿ ನಡೆದ ದುರಂತ ಕುರಿತು ಎಸ್‌ಐಟಿ ತನಿಖೆ ನಡೆಸಲಿದೆ.
ದುರಂತಕ್ಕೆ ಸಂಬಂಧಿಸಿದಂತೆ ವಿಜಯ್ ನೇತೃತ್ವದ ಟಿವಿಕೆ ಪಕ್ಷದ ಸಂಘಟಕರನ್ನೂ ಹೈಕೋರ್ಟ್ ಏಕಸದಸ್ಯ ಪೀಠವು ತರಾಟೆಗೆ ತಗೆದುಕೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.