ಬಂಧನ
(ಸಾಂದರ್ಭಿಕ ಚಿತ್ರ)
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಕಲಿ ದಾಖಲೆಗಳನ್ನು ಬಳಸಿಕೊಂಡು ಮತದಾರರ ಗುರುತಿನ ಚೀಟಿಯನ್ನು ಪಡೆದುಕೊಳ್ಳಲು ಯತ್ನಿಸಿದ ಆರೋಪದಲ್ಲಿ ಇಬ್ಬರನ್ನು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ ಪೊಲೀಸರು ತಿಳಿಸಿದ್ದಾರೆ.
ಡಿಸೆಂಬರ್ 30ರಂದು ವಿಧಾನಸಭಾ ಕ್ಷೇತ್ರದ-09 (ಕಿರಾರಿ) ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ಸಲ್ಲಿಸಿದ್ದ ದೂರಿನ ಆಧಾರದಲ್ಲಿ ಈ ಕ್ರಮ ಜರುಗಿಸಲಾಗಿದೆ ಎಂದು ಪ್ರೇಮ್ ನಗರ ಪೊಲೀಸರು ವಿವರಿಸಿದ್ದಾರೆ.
1951ರ ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 31 ಮತ್ತು ಬಿಎನ್‌ಎಸ್ ಕಾಯ್ದೆಯ ಸೆಕ್ಷನ್ 336 (3) ಮತ್ತು 340 (2) ಅಡಿಯಲ್ಲಿ ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
‘ಬಿಜೆಪಿಯು ಬೇರೆ ರಾಜ್ಯಗಳ ಮತದಾರರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಯಲ್ಲಿ ಸೇರಿಸುವ ಮೂಲಕ ನಕಲಿ ಮತದಾರರನ್ನು ಸೃಷ್ಟಿಸುತ್ತಿದೆ. ಇದಕ್ಕಾಗಿ ಬಿಜೆಪಿ ನಾಯಕರ ಮನೆಯನ್ನೇ ಆ ಮತದಾರರ ವಸತಿ ಸ್ಥಳವೆಂದು ನಮೂದಿಸಲಾಗುತ್ತಿದೆ’ ಎಂದು ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್ ಶನಿವಾರ ಆರೋಪಿಸಿದ್ದರು.
‘ವಸತಿ ಪ್ರದೇಶದ ಬದಲಾವಣೆಯ ನೆಪದಲ್ಲಿ ಬಿಜೆಪಿ ನಾಯಕರಿಗೆ ಸೇರಿದ ಸ್ಥಳಗಳನ್ನೇ ನೂತನ ಮತದಾರರ ವಸತಿ ಪ್ರದೇಶವೆಂದು ದಾಖಲಿಸಿ ದೆಹಲಿಯ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಅರ್ಜಿ ಸಲ್ಲಿಸಲಾಗುತ್ತಿದೆ. ಈ ಪೈಕಿ ಕರ್ನಾಟಕದ ಮಾಜಿ ಸಂಸದ ಜಿ. ಸಿದ್ದೇಶ್ವರ ಅವರ ನಿವಾಸದ ಹೆಸರಿನಲ್ಲಿ 13 ಹಾಗೂ ಬಿಜೆಪಿ ನಾಯಕ ಪರ್ವೇಶ್ ವರ್ಮಾ ಅವರ ಸರ್ಕಾರಿ ನಿವಾಸದಿಂದ 32 ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲಾಗಿದೆ’ ಎಂದು ಕೇಜ್ರಿವಾಲ್ ಅವರು ಚುನಾವಣಾ ಆಯೋಗಕ್ಕೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆ.5ರಂದು ಚುನಾವಣೆ ನಡೆಯಲಿದ್ದು, ಫೆ.8ರಂದು ಫಲಿತಾಂಶ ಹೊರಬೀಳಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.