ನವದೆಹಲಿ: ಕಾಲ್ತುಳಿತ ಪ್ರಕರಣದ ತನಿಖೆ ನಡೆಸಲು ಇಬ್ಬರು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ ಎಂದು ರೈಲ್ವೆ ಮಂಡಳಿಯ ಮಾಹಿತಿ ಮತ್ತು ಪ್ರಚಾರದ ಕಾರ್ಯನಿರ್ವಾಹಕ ನಿರ್ದೇಶಕ ದಿಲೀಪ್ ಕುಮಾರ್ ತಿಳಿಸಿದ್ದಾರೆ.
ಉತ್ತರ ರೈಲ್ವೆಯ ಪ್ರಧಾನ ಮುಖ್ಯ ವಾಣಿಜ್ಯ ವ್ಯವಸ್ಥಾಪಕ ನರಸಿಂಗ್ ದೇವು ಮತ್ತು ಉತ್ತರ ರೈಲ್ವೆಯ ಪ್ರಧಾನ ಮುಖ್ಯ ಭದ್ರತಾ ಆಯುಕ್ತ ಪಂಕಜ್ ಗಂಗ್ವಾರ್ ಸಮಿತಿಯ ಸದಸ್ಯರಾಗಿದ್ದಾರೆ.
ಇಂದಿನಿಂದಲೇ ತನಿಖೆ ಆರಂಭಿಸಿರುವ ಸಮಿತಿಯು ರೈಲು ನಿಲ್ದಾಣದ ಎಲ್ಲಾ ಸಿಸಿಟಿವಿ ದೃಶ್ಯಾವಳಿಗಳನ್ನು ಸುರಕ್ಷಿತವಾಗಿರಿಸುವಂತೆ ಆದೇಶ ನೀಡಿದೆ.
‘ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಪ್ರಯಾಣಿಕರನ್ನು ವಿಶೇಷ ರೈಲುಗಳ ಮೂಲಕ ಕಳುಹಿಸಿಕೊಡಲಾಗಿದೆ. ಯಥಾಸ್ಥಿತಿಯಂತೆ ರೈಲು ಸಂಚಾರ ಪ್ರಾರಂಭವಾಗಿದೆ’ ಎಂದು ದಿಲೀಪ್ ಅವರು ತಿಳಿಸಿದ್ದಾರೆ.
‘ರೈಲು ನಿಲ್ದಾಣದಲ್ಲಿ ದಟ್ಟಣೆ ಹೆಚ್ಚಿದ್ದರಿಂದ ನಾಲ್ಕು ಹೆಚ್ಚುವರಿ ರೈಲು ಸಂಚಾರಕ್ಕೆ ನಿರ್ಧರಿಸಲಾಗಿದೆ’ ಎಂದು ತಿಳಿಸಿದ್ದಾರೆ.
ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಪಾಲ್ಗೊಳ್ಳಲು ಪ್ರಯಾಣಿಕರು ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ಜಮಾಯಿಸಿದ್ದರು. ಆದರೆ ಕೆಲವು ರೈಲುಗಳು ವಿಳಂಬವಾದ ಕಾರಣ ಪ್ಲಾಟ್‌ಫಾರ್ಮ್ ಸಂಖ್ಯೆ 14ರ ಬಳಿ ಕಾಲ್ತುಳಿತ ಉಂಟಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ಲಾರ್ಟ್‌ಫಾರ್ಮ್‌ನಲ್ಲಿ ತಪ್ಪಾಗಿ ಪ್ರಕಟಣೆ ಹೊರಡಿಸಿದ್ದರಿಂದ ಗೊಂದಲವಾಗಿ ಕಾಲ್ತುಳಿತ ಸಂಭವಿಸಿರಬಹುದು ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.