
ಪ್ರಜಾವಾಣಿ ವಾರ್ತೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್‌ತಾವಾಂಡ್ ಜಿಲ್ಲೆಯ ಅರಣ್ಯಪ್ರದೇಶದಲ್ಲಿ ಭಯೋತ್ಪಾದಕರ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆ.
ವಿಶೇಷ ಗುಪ್ತಚರ ಮಾಹಿತಿಯ ಆಧಾರದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದವು. ಈ ವೇಳೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಪ್ರತಿಯಾಗಿ ಸೇನೆಯು ದಾಳಿ ಮಾಡಿದೆ. ಭಯೋತ್ಪಾದಕರು ತಪ್ಪಿಸಿಕೊಳದಂತೆ ದಟ್ಟಅರಣ್ಯವನ್ನು ಸೇನಾಪಡೆಗಳು ಸುತ್ತುವರಿದಿವೆ.
ಜೈಷ್ ಇ–ಮೊಹಮ್ಮದ್ (ಜೆಇಎಂ) ಸಂಘಟನಗೆ ಸೇರಿದ ಇಬ್ಬರು ಭಯೋತ್ಪಾದಕರು ಅರಣ್ಯದಲ್ಲಿ ಇದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಳೆದ ಕೆಲ ವಾರಗಳಲ್ಲಿ ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ ಶಂಕಿತ ಡ್ರೋನ್ ಹಾರಾಟ ಮಡೆದ ಕಾರಣ ಜಮ್ಮು ಮತ್ತು ಕಾಶ್ಮೀರಗಳಲ್ಲಿ ಭದ್ರತೆಯನ್ನು ತೀವ್ರಗೊಳಿಸಲಾಗಿದೆ.