ADVERTISEMENT

ಯುಎಪಿಎ ಅಡಿ ದಾಖಲಾಗಿರುವ ಪ್ರಕರಣ: ಜಾಮೀನು ಅರ್ಜಿ ಹಿಂಪಡೆದ ಉಮರ್‌ ಖಾಲಿದ್‌

ಪಿಟಿಐ
Published 14 ಫೆಬ್ರುವರಿ 2024, 13:56 IST
Last Updated 14 ಫೆಬ್ರುವರಿ 2024, 13:56 IST
ಉಮರ್‌ ಖಾಲಿದ್‌ 
ಉಮರ್‌ ಖಾಲಿದ್‌    

ನವದೆಹಲಿ(ಪಿಟಿಐ): ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜೆಎನ್‌ಯು ಹಳೆಯ ವಿದ್ಯಾರ್ಥಿ ಉಮರ್‌ ಖಾಲಿದ್‌ ಅವರು ಬುಧವಾರ ಹಿಂಪಡೆದಿದ್ದಾರೆ.

ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ವಿರೋಧಿಸಿ 2020ರಲ್ಲಿ ದೆಹಲಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದ ವೇಳೆ ಗಲಭೆ ನಡೆದಿತ್ತು. ಆ ಗಲಭೆಗೆ ಸಂಚು ರೂಪಿಸಿದ ಆರೋಪದ ಮೇಲೆ ಉಮರ್‌ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಹಿರಿಯ ವಕೀಲ ಕಪಿಲ್‌ ಸಿಬಲ್‌ ಅವರು ಉಮರ್ ಪರ ಕೋರ್ಟ್‌ನಲ್ಲಿ ಹಾಜರಿದ್ದರು. ‘ಉಮರ್‌ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಕಾನೂನಾತ್ಮಕ ಪ್ರಶ್ನೆಗಳನ್ನು ಎತ್ತಲು ನಾನು ಇಚ್ಛಿಸುತ್ತೇನೆ. ಆದರೆ ಬದಲಾದ ಸನ್ನಿವೇಶದಲ್ಲಿ ಉಮರ್‌ ಅವರು ತಮ್ಮ ಜಾಮೀನು ಅರ್ಜಿಯನ್ನು ಹಿಂಪಡೆಯಲು ಬಯಸುತ್ತಿದ್ದಾರೆ. ನಾವು ವಿಚಾರಣಾ ನ್ಯಾಯಾಲಯದಲ್ಲೇ ಅದೃಷ್ಟ ಪರೀಕ್ಷೆ ಮಾಡುತ್ತೇವೆ’ ಎಂದು ಅವರು ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಮತ್ತು ಪಂಕಜ್‌ ಮಿತ್ತಲ್‌ ಅವರಿದ್ದ ನ್ಯಾಯಪೀಠಕ್ಕೆ ಹೇಳಿದರು.

ADVERTISEMENT

ಆದರೆ, ‘ಬದಲಾದ ಸನ್ನಿವೇಶ’ದ ಕುರಿತು ಸಿಬಲ್‌ ಅವರು ವಿವರಿಸಲಿಲ್ಲ.

ನ್ಯಾಯಪೀಠವು ಉಮರ್‌ ಅವರ ಮನವಿಯನ್ನು ಪುರಸ್ಕರಿಸಿ, ಅರ್ಜಿ ಹಿಂಪಡೆಯಲು ಅನುಮತಿ ನೀಡಿದೆ.

ಈ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್‌ ಅವರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಅರ್ಜಿಯನ್ನು ಹೈಕೋರ್ಟ್‌ ತಿರಸ್ಕರಿಸಿತ್ತು. ಹೈಕೋರ್ಟ್‌ ಆದೇಶವನ್ನು ಅವರು 2022ರ ಅಕ್ಟೋಬರ್‌ 18ರಂದು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.