ಥಾಣೆ: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಶನಿವಾರ ಕೇಂದ್ರ ಮತ್ತು ಮಣಿಪುರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಥಾಣೆ ನಗರದಲ್ಲಿ ಉತ್ತರ ಭಾರತೀಯರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಠಾಕ್ರೆ, ಮಣಿಪುರದಲ್ಲಿ ಮಹಿಳೆಯರನ್ನು ಅವಮಾನಿಸುತ್ತಿದ್ದಾಗ ದೆಹಲಿಯಲ್ಲಿ ಅಧಿಕಾರದಲ್ಲಿರುವವರು (ಕೇಂದ್ರ ಸರ್ಕಾರ) ಸೂಕ್ತ ಕ್ರಮ ಕೈಗೊಳ್ಳಲು ವಿಫಲರಾಗಿ ಮಹಾಭಾರತದ ಧೃತರಾಷ್ಟ್ರನಂತೆ ವರ್ತಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಮಣಿಪುರದಲ್ಲಿ ಹಿಂಸಾಚಾರ ಪ್ರಾರಂಭವಾದಾಗಿನಿಂದ ಇಂತಹ ಹಲವಾರು ಘಟನೆಗಳು ನಡೆದಿವೆ. ಇದಕ್ಕೆ ಮುಖ್ಯಮಂತ್ರಿಗಳ ಆಡಳಿತ ವೈಫಲ್ಯವೇ ಕಾರಣ ಎಂದು ಎನ್. ಬಿರೇನ್ ಸಿಂಗ್ ಅವರನ್ನು ತರಾಟೆಗೆ ತೆಗೆದುಕೊಂಡರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ಒಬ್ಬ ಬುಡಕಟ್ಟು ಮಹಿಳೆ, ಮಣಿಪುರದಲ್ಲಿ ನಡೆದ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಕುರಿತು ನೀವು ಏನು ಮಾಡುತ್ತಿದ್ದೀರಿ? ನಿಮಗೆ ಯಾವುದೇ ಸೂಕ್ಷ್ಮತೆ ಇಲ್ಲವೇ? ಎಂದು ಠಾಕ್ರೆ ಪ್ರಶ್ನಿಸಿದರು. ಮಣಿಪುರ ಗವರ್ನರ್ ಅನುಸೂಯಾ ಉಯಿಕೆ ಕೂಡ ಒಬ್ಬ ಮಹಿಳೆ, ಅವರು ಏನು ಮಾಡುತ್ತಿದ್ದಾರೆ? ಎಂದು ಪ್ರಶ್ನಿಸಿದ ಉದ್ಧವ್ ಠಾಕ್ರೆ ನಿಮಗೆ ನಾಚಿಕೆಯಾಗಬೇಕು ಎಂದು ವಾಗ್ದಾಳಿ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.