ADVERTISEMENT

ಪರೀಕ್ಷೆ ರದ್ದು ನಿಯಮಬಾಹಿರ: ಯುಜಿಸಿ

ಪಿಟಿಐ
Published 10 ಆಗಸ್ಟ್ 2020, 12:57 IST
Last Updated 10 ಆಗಸ್ಟ್ 2020, 12:57 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಕೋವಿಡ್‌–19 ಸಾಂಕ್ರಾಮಿಕ ರೋಗದ ಕಾರಣ, ದೆಹಲಿ ಮತ್ತು ಮಹಾರಾಷ್ಟ್ರ ಸರ್ಕಾರಗಳು ವಿಶ್ವವಿದ್ಯಾಲಯಗಳ ಪದವಿ ಮತ್ತು ಸ್ನಾತಕೋತ್ತರ ಪದವಿಯ ಅಂತಿಮ ವರ್ಷದ ಪರೀಕ್ಷೆಯನ್ನು ರದ್ದುಗೊಳಿಸುವ ನಿರ್ಧಾರವನ್ನು ಹೇಗೆ ತೆಗೆದುಕೊಂಡವು ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗವು (ಯುಜಿಸಿ) ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದೆ.

ಪರೀಕ್ಷೆ ರದ್ದುಗೊಳಿಸಿರುವ ಕ್ರಮವು ಯುಜಿಸಿ ನಿಯಮಗಳಿಗೆ ವಿರುದ್ಧವಾಗಿದೆ ಎಂದು ಅದು ಪ್ರತಿಪಾದಿಸಿದೆ.

‘ರಾಜ್ಯಗಳು ಯುಜಿಸಿಯ ನಿಯಮಗಳನ್ನು ಬದಲಾಯಿಸಲು ಸಾಧ್ಯವಿಲ್ಲ. ಪದವಿಗೆ ಸಂಬಂಧಿಸಿದ ನಿಯಮಗಳನ್ನು ರೂಪಿಸಲು ಯುಜಿಸಿಗೆ ಮಾತ್ರ ಅಧಿಕಾರವಿದೆ. ಪರೀಕ್ಷೆಗಳನ್ನು ನಡೆಸದಿರುವುದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರಿಯಲ್ಲ. ಈ ನಿಟ್ಟಿನಲ್ಲಿ ರಾಜ್ಯಗಳು ಏಕಪಕ್ಷೀಯವಾಗಿ ವರ್ತಿಸಿದರೆ ಪದವಿಗಳಿಗೆ ಮಾನ್ಯತೆ ಇರುವುದಿಲ್ಲ’ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠಕ್ಕೆ ಮಾಹಿತಿ ನೀಡಿದರು.

ADVERTISEMENT

ಕೋವಿಡ್‌–19 ಮಧ್ಯೆ ಸೆಪ್ಟೆಂಬರ್ 30ರೊಳಗೆ ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸುವಂತೆ ಜುಲೈ 6ರಂದು ಎಲ್ಲಾ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಿಗೆ ನಿರ್ದೇಶನ ನೀಡಿರುವ ಕ್ರಮವನ್ನು ಪ್ರಶ್ನಿಸಿ ಹಲವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಪೀಠ ನಡೆಸುತ್ತಿದೆ.

ದೆಹಲಿ ಮತ್ತು ಮಹಾರಾಷ್ಟ್ರ ಸರ್ಕಾರಗಳು ಪದವಿ ಮತ್ತು ಸ್ನಾತಕೋತ್ತರ ಪದವಿಯ ಅಂತಿಮ ವರ್ಷದ ಪದವಿ ಪರೀಕ್ಷೆಯನ್ನು ರದ್ದುಗೊಳಿಸಿದೆ ಎನ್ನುವ ಕುರಿತು ಮೆಹ್ತಾ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಪೀಠಕ್ಕೆ ತಿಳಿಸಿದರು.

ದೆಹಲಿ ಮತ್ತು ಮಹಾರಾಷ್ಟ್ರ ಸಲ್ಲಿಸಿರುವ ಅಫಿಡವಿಟ್‌ಗೆ ಸಂಬಂಧಿಸಿದಂತೆ ಯುಜಿಸಿಯು ತನ್ನ ಪ್ರತಿಕ್ರಿಯೆಯನ್ನು ದಾಖಲಿಸಲಿದೆ ಎಂದೂ ಮೆಹ್ತಾ ತಿಳಿಸಿದ್ದಾರೆ. ಪ್ರತಿಕ್ರಿಯೆಗಾಗಿ ಯುಜಿಸಿಗೆ ಕಾಲಾವಕಾಶ ನೀಡಿರುವ ನ್ಯಾಯಾಲಯವು, ವಿಚಾರಣೆಯನ್ನು ಆಗಸ್ಟ್ 14ಕ್ಕೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.