ನವದೆಹಲಿ: 2020ರಲ್ಲಿ ರಾಜಧಾನಿ ದೆಹಲಿಯಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಪಿತೂರಿ ನಡೆಸಿದ ಆರೋಪ ಹೊತ್ತ ಪ್ರಕರಣದಲ್ಲಿ ಜಾಮೀನು ಅರ್ಜಿ ತಿರಸ್ಕರಿಸಿರುವ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಹೋರಾಟಗಾರ ಉಮರ್ ಖಾಲಿದ್ ಸುಪ್ರೀಂ ಕೋರ್ಟ್ ಮೊರೆಹೋಗಿದ್ದಾರೆ.
ಸೆಪ್ಟೆಂಬರ್ 2ರಂದು ಖಾಲಿದ್, ಶರ್ಜೀಲ್ ಇಮಾಮ್ ಸೇರಿ ಒಂಬತ್ತು ಜನರಿಗೆ ಹೈಕೋರ್ಟ್ ಜಾಮೀನು ನಿರಾಕರಿಸಿತ್ತು. ಕಳೆದ ವಾರ ಇಮಾಮ್ ಮತ್ತು ಗಲ್ಫಿಶಾ ಫಾತಿಮಾ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
‘ಸಂವಿಧಾನ ಈ ದೇಶದ ನಾಗರಿಕರಿಗೆ ಪ್ರತಿಭಟಿಸುವ ಅವಕಾಶ ಕಲ್ಪಿಸಿದೆ. ಆದರೆ ಅದು ಕಾನೂನಿನ ಮಿತಿಯಲ್ಲಿರಬೇಕು. ಪ್ರತಿಭಟನೆಯಲ್ಲಿ ಹಿಂಸಾಚಾರ ನಡೆಸುವ ಪಿತೂರಿಯನ್ನು ಸಹಿಸಲಾಗದು’ ಎಂದು ಜಾಮೀನು ನಿರಾಕರಿಸುವ ವೇಳೆ ಹೈಕೋರ್ಟ್ ಹೇಳಿತ್ತು.
ಸಿಎಎ ಮತ್ತು ಎನ್‌ಆರ್‌ಸಿ ವಿರೋಧಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಹಿಂಸಾಚಾರ ನಡೆದಿತ್ತು. ಖಾಲಿದ್ ಸೇರಿ ಇತರೆ ಆರೋಪಿಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆ (ನಿಯಂತ್ರಣ)ಕಾಯ್ದೆ (ಯುಎಪಿಎ) ಅಡಿ ಪ್ರಕರಣ ದಾಖಲಾಗಿತ್ತು. 2020ರಿಂದಲೂ ಜೈಲಿನಲ್ಲಿರುವ ಆರೋಪಿಗಳು ವಿಚಾರಣಾ ನ್ಯಾಯಾಲಯದ ನಂತರ ಹೈಕೋರ್ಟ್‌ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಅಲ್ಲದೇ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.