
ವಿಶ್ವಸಂಸ್ಥೆ: ಭಾರತದ ರಾಜಧಾನಿ ನವದೆಹಲಿಯ ಕೆಂಪುಕೋಟೆ ಬಳಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
‘ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟ ಪ್ರಕರಣದಲ್ಲಿ ಪ್ರಾಣ ಕಳೆದುಕೊಂಡವರು ಮತ್ತು ಗಾಯಾಳುಗಳಿಗೆ ನಾವು ಸಂತಾಪ ವ್ಯಕ್ತಪಡಿಸುತ್ತೇವೆ. ಜತೆಗೆ, ಘಟನೆ ಸಂಬಂಧ ಸಮಗ್ರ ತನಿಖೆ ನಡೆಸುವಂತೆ ಭಾರತ ಸರ್ಕಾರಕ್ಕೆ ಮನವಿ ಮಾಡುತ್ತೇವೆ’ ಎಂದು ವಿಶ್ವಸಂಸ್ಥೆಯ ಉಪ ವಕ್ತಾರ ಫರ್ಹಾನ್ ಹಕ್ ಹೇಳಿದ್ದಾರೆ.
ಪಾಕ್ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಮತ್ತು ಭಾರತ ರಾಜಧಾನಿ ನವದೆಹಲಿಯಲ್ಲಿ ನಡೆದ ಕಾರು ಸ್ಫೋಟ ಪ್ರಕರಣದ ಬಗ್ಗೆ ಹಕ್ ಪ್ರತಿಕ್ರಿಯಿಸಿದ್ದಾರೆ.
ಇಸ್ಲಾಮಾಬಾದ್‌ನ ಜಿಲ್ಲಾ ನ್ಯಾಯಾಲಯ ಸಮುಚ್ಚಯದ ಹೊರಗೆ ಮಂಗಳವಾರ ವ್ಯಕ್ತಿಯೊಬ್ಬ ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 12 ಮಂದಿ ಮೃತಪಟ್ಟಿದ್ದು, 36 ಮಂದಿ ಗಾಯಗೊಂಡಿದ್ದರು. ದಾಳಿ ಕುರಿತು ಪ್ರತಿಕ್ರಿಯಿಸಿದ್ದ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್, ‘ಭಾರತದ ಬೆಂಬಲದೊಂದಿಗೆ ಸಕ್ರಿಯವಾಗಿರುವ ಗುಂಪುಗಳು ದಾಳಿ ನಡೆಸಿವೆ’ ಎಂದು ಆರೋಪಿಸಿದ್ದರು.
‘ಇಸ್ಲಾಮಾಬಾದ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಭಾರತವನ್ನು ಹೊಣೆ ಮಾಡುವ ನಿಟ್ಟಿನಲ್ಲಿ ಶೆಹಬಾಜ್ ಶರೀಫ್ ಮಾಡಿರುವ ಆರೋಪಗಳು ಆಧಾರರಹಿತವಾಗಿವೆ. ಅಂತರರಾಷ್ಟ್ರೀಯ ಸಮುದಾಯವು ವಾಸ್ತವ ಸಂಗತಿಗಳ ಬಗ್ಗೆ ಚೆನ್ನಾಗಿ ತಿಳಿದಿದೆ. ಪಾಕ್‌ನ ಹತಾಶ ತಂತ್ರಗಳಿಂದ ದಾರಿ ತಪ್ಪುವುದಿಲ್ಲ’ ಎಂದು ವಿದೇಶಾಂಗ ವ್ಯವಹಾರಗಳ ಇಲಾಖೆ ವಕ್ತಾರ ರಣಧೀರ್ ಜೈಸ್ವಾಲ್ ತಿರುಗೇಟು ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.