ADVERTISEMENT

ನಾಳೆ ಕೇಂದ್ರ ಸಂಪುಟ ಸಭೆ: 3ನೇ ಹಂತದ ಲಾಕ್‌ಡೌನ್‌ ಬಗ್ಗೆ ತೀರ್ಮಾನ ಸಾಧ್ಯತೆ

ಏಜೆನ್ಸೀಸ್
Published 28 ಜುಲೈ 2020, 12:27 IST
Last Updated 28 ಜುಲೈ 2020, 12:27 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ಮಹತ್ವದ ಕೇಂದ್ರ ಸಂಪುಟ ಸಭೆ ನಡೆಯಲಿದ್ದು ಸಭೆಯಲ್ಲಿ ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳುವ ಸಾಧ್ಯತೆಗಳಿವೆ.

ಎರಡನೇ ಹಂತದ ಲಾಕ್‌ಡೌನ್‌ ಜುಲೈ 31ಕ್ಕೆ ಕೊನೆಯಾಗಲಿದೆ. ಈ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ. ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕ ಹರಡುತ್ತಿದ್ದು ಮುಂದಿನ ದಿನಗಳಲ್ಲಿ ಸೋಂಕು ನಿಯಂತ್ರಣ ಕುರಿತಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚೆಯಾಗಲಿದೆ.

ಬುಧವಾರ ಬೆಳಗ್ಗೆ 10.30ಕ್ಕೆ ಮೋದಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು ಮೂರನೇ ಹಂತದ ಲಾಕ್‌ಡೌನ್‌ ಬಗ್ಗೆ ಹಿರಿಯ ಸಚಿವರು ಹಾಗೂ ಅಧಿಕಾರಿಗಳ ಅಭಿಪ್ರಾಯ ಪಡೆದು ತೀರ್ಮಾನ ಮಾಡಲಾಗುವುದು ಬಲ್ಲ ಮೂಲಗಳು ತಿಳಿಸಿವೆ.

ADVERTISEMENT

ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಕೇಂದ್ರದ 20 ಲಕ್ಷ ಕೋಟಿ ಯೋಜನೆಯ ಪರಾಮರ್ಶೆ ನಡೆಯುವ ಸಾಧ್ಯತೆಗಳು ಇವೆ ಎನ್ನಲಾಗಿದೆ.

ಮೊದಲು ಮತ್ತು ಎರಡನೇ ಹಂತದಲ್ಲಿ ಲಾಕ್‌ಡೌನ್‌ ವಿಸ್ತರಣೆ ಮಾಡುವಾಗ ಪ್ರಧಾನಿ ಮೋದಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ನಡೆಸಿದ್ದರು. ಆದರೆ ಈ ಸಲ ಅಂತಹ ಯಾವುದೇ ಮಹತ್ವದ ಬೆಳವಣಿಗೆಗಳು ಕಂಡುಬಂದಿಲ್ಲ. ಈ ಬಾರಿ ಮುಖ್ಯಮಂತ್ರಿಗಳ ಅಭಿಪ್ರಾಯ ಸಂಗ್ರಹ ಮಾಡದೇ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆಗಳಿವೆ.

ದೇಶದ ವಿವಿಧ ಮಹಾನಗರಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಳವಾಗುತ್ತಿರುವುದರ ಬಗ್ಗೆಯೂ ಚರ್ಚೆ ನಡೆಯಲಿದೆ. ಸಿನಿಮಾ ಮಂದಿರ, ಶಾಲೆ, ಕಾಲೇಜು, ಮೆಟ್ರೋ, ರೈಲು ಸೇವೆ ಆರಂಭದ ಬಗ್ಗೆ ಅಂತಿಮ ತೀರ್ಮಾನ ಹೊರ ತೆಗೆದುಕೊಳ್ಳುವ ಸಾಧ್ಯತೆಗಳಿವೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.