
ನವದೆಹಲಿ: ಉನ್ನಾವೊ ಅತ್ಯಾಚಾರ ಪ್ರಕರಣದ ಅಪರಾಧಿ ಕುಲದೀಪ್ ಸಿಂಗ್ ಸೆಂಗರ್ ಅನುಭವಿಸುತ್ತಿದ್ದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ, ಷರತ್ತುಬದ್ಧ ಜಾಮೀನು ನೀಡಿರುವ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ(Special Leave Petition) ಸಲ್ಲಿಸಿದೆ.
ಉನ್ನಾವೊ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ನ ವಿಭಾಗೀಯ ಪೀಠ ನೀಡಿದ ತೀರ್ಪನ್ನು ಅಧ್ಯಯನ ಮಾಡಿದ ನಂತರ ಮೇಲ್ಮನವಿ(ಎಸ್‌ಎಲ್‌ಪಿ) ಸಲ್ಲಿಸಲಾಗಿದೆ ಎಂದು ಸಿಬಿಐ ವಕ್ತಾರರು ತಿಳಿಸಿದ್ದಾರೆ.
ಸೆಂಗರ್‌ಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿರುವುದನ್ನು ಖಂಡಿಸಿ ಸಂತ್ರಸ್ತೆ, ಅವರ ತಾಯಿ ಮತ್ತು ಮಹಿಳಾ ಪರ ಹೋರಾಟಗಾರರು ದೆಹಲಿ ಹೈಕೋರ್ಟ್ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದ್ದಾರೆ. ಸೆಂಗರ್‌ಗೆ ನೀಡಿರುವ ಜಾಮೀನನ್ನು ರದ್ದುಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಸಾಮಾಜಿಕ ಹೋರಾಟಗಾರರಾದ ವಕೀಲೆ ಭಯನಾ ಮತ್ತು ಅಖಿಲ ಭಾರತ ಮಹಿಳಾ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ನಾನು ಇಡೀ ಹೈಕೋರ್ಟ್ ಅನ್ನು ದೂಷಿಸುವುದಿಲ್ಲ. ಆದರೆ ಇಬ್ಬರು ನ್ಯಾಯಮೂರ್ತಿಗಳು ನಮ್ಮ ನಂಬಿಕೆಯನ್ನು ನುಚ್ಚು ನೂರು ಮಾಡಿದ್ದಾರೆ. ಹಿಂದಿನ ನ್ಯಾಯಮೂರ್ತಿ ಅವರು ನಮಗೆ ನ್ಯಾಯ ಒದಗಿಸಿದ್ದರು. ಆದರೆ ಈಗ ಅಪರಾಧಿಗೆ ಜಾಮೀನು ಸಿಕ್ಕಿದೆ– ಸಂತ್ರಸ್ತೆಯ ತಾಯಿ
ಉನ್ನಾವೊ ಅತ್ಯಾಚಾರ ಪ್ರಕರಣ ಸಂಬಂಧ 2019ರಲ್ಲಿ ದೆಹಲಿಯ ವಿಚಾರಣಾ ನ್ಯಾಯಾಲಯ ಸೆಂಗರ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಅದನ್ನು ಪ್ರಶ್ನಿಸಿ ಸೆಂಗರ್ ಸಲ್ಲಿಸಿರುವ ಮೇಲ್ಮನವಿ ಅರ್ಜಿ ಇತ್ಯರ್ಥ ಆಗುವರೆಗೆ ಶಿಕ್ಷೆಯನ್ನು ಅಮಾನತಿನಲ್ಲಿರಿಸಿ ದೆಹಲಿ ಹೈಕೋರ್ಟ್ ಮಂಗಳವಾರ ತೀರ್ಪು ನೀಡಿ, ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.
ಈ ಪ್ರಕರಣದ ಶಿಕ್ಷೆ ಅಮಾನತುಗೊಂಡಿದ್ದರೂ ಸಂತ್ರಸ್ತೆ ತಂದೆಯ ಕಸ್ಟಡಿ ಸಾವು ಪ್ರಕರಣದಲ್ಲಿ ಸೆಂಗರ್‌ಗೆ 10 ವರ್ಷಗಳ ಶಿಕ್ಷೆಯಾಗಿದೆ. ಹೀಗಾಗಿ ಅವರು ಜೈಲಿನಲ್ಲಿಯೇ ಇರುತ್ತಾರೆ ಎಂದೂ ನ್ಯಾಯಾಲಯ ಹೇಳಿದೆ.
ಅಪರಾಧಿಯ ಶಿಕ್ಷೆ ಅಮಾನತುಗೊಂಡಿರುವುದಕ್ಕೆ ನಾನು ಹೆದರುವುದಿಲ್ಲ. ದೇಶದ ಮಹಿಳೆಯರಿಗಾಗುತ್ತಿರುವ ಅನ್ಯಾಯವನ್ನು ಸಾರ್ವಜನಿಕವಾಗಿ ಪ್ರಶ್ನಿಸಲು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದೇನೆ. ನನ್ನನ್ನು ಜೈಲಿಗೆ ಹಾಕಿದರೂ ನಾನು ಹೆದರುವುದಿಲ್ಲ–ಸಂತ್ರಸ್ತೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.